ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಮುಂಜಾನೆ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಈ ವೇಳೆ ಪತ್ನಿಯೊಂದಿಗೆ ಆಗಮಿಸಿದ ಕುಮಾರಸ್ವಾಮಿ ಅವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿ ನಡೆಯುತ್ತಿರುವ ನವಚಂಡಿಕಾಯಾಗದಲ್ಲೂ ಪಾಲ್ಗೊಂಡು, ಅರ್ಚಕರ ನೇತೃತ್ವದಲ್ಲಿ ಸಂಕಲ್ಪ ವಿಧಿ ನೆರವೇರಿಸಿದರು.
ಸುಮಾರು ನಾಲ್ಕು ವರ್ಷಗಳ ಹಿಂದೆ ಮಾಡಿಕೊಂಡ ಹರಕೆಯ ಹಿನ್ನೆಲೆಯಲ್ಲಿ ಹಾಗೂ ದೋಷ ಪರಿಹಾರಾರ್ಥವಾಗಿ ನವಚಂಡಿಕಾಯಾಗ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಕೊಲ್ಲೂರಿನ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಕುಮಾರಸ್ವಾಮಿ ಅವರು ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದಕ್ಷಿಣ ಕನ್ನಡ ಜಿಲ್ಲೆಯತ್ತ ಪ್ರಯಾಣ ಮುಂದುವರಿಸಲಿದ್ದಾರೆ.










