ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ನಡುವಿನ ವಾಗ್ವಾದ ಮತ್ತು ನಿಂದನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ವೀರ್ಗೆ ಕರ್ನಾಟಕ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಅವರ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್ಐಆರ್ಗಳ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳನ್ನು ರದ್ದುಗೊಳಿಸುವಂತೆ ಕೋರಿ ಧನ್ವೀರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅನಂತ್ ರಮಾನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠ ನಡೆಸಿತು.
ವಿಚಾರಣೆ ವೇಳೆ ಧನ್ವೀರ್ ಪರ ಹಿರಿಯ ವಕೀಲ ಫಣೀಂದ್ರ ವಾದ ಮಂಡಿಸಿದರು. ದೂರಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಮಾಡಲಾಗಿದೆಯಾದರೂ, ನಿರ್ದಿಷ್ಟವಾಗಿ ಯಾವ ಮಹಿಳೆಯನ್ನು ನಿಂದಿಸಲಾಗಿದೆ ಎಂಬುದನ್ನು ಉಲ್ಲೇಖಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಕೇವಲ ಅವಾಚ್ಯ ಶಬ್ದಗಳ ಬಳಕೆಯಿಂದ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವುದಿಲ್ಲ. ಹೀಗಾಗಿ ಪ್ರಕರಣಗಳ ತನಿಖೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಸರ್ಕಾರದ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ತನಿಖೆಗೆ ತಡೆಯಾಜ್ಞೆ ನೀಡಬಾರದು ಎಂದು ವಾದಿಸಿದರು.
ಉಭಯ ಪಕ್ಷಗಳ ವಾದ ಆಲಿಸಿದ ನ್ಯಾಯಪೀಠ, ರಾಜಾಜಿನಗರ ಮತ್ತು ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್ಐಆರ್ಗಳ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತು. ಅಲ್ಲದೆ, ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನೂ ಮುಂದುವರಿಸಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂದನೆ ನಡೆದಿದೆ ಎನ್ನಲಾದ ಆಡಿಯೋದ ಸಂಪೂರ್ಣ ವಿವರಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ.







