ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇದೀಗ ಸಮಸ್ಯೆ ಬಗೆಹರಿಸಲು ಮುಂದಾಗಿದ್ದಾರೆ.
ಕರ್ನಾಟಕದ ದೀರ್ಘಕಾಲೀನ ನೀರು ಮತ್ತು ನೀರಾವರಿ ಹಿತಾಸಕ್ತಿಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ಪ್ರಧಾನಿಯನ್ನು ಭೇಟಿಯಾಗಿ ಪತ್ರದಲ್ಲಿ ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ದೇವೇಗೌಡರು, ಕರ್ನಾಟಕದ ಜಲ ಮತ್ತು ನೀರಾವರಿ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿಗೆ ಪತ್ರ ಬರೆದಿದ್ದೇನೆ. ಶೀಘ್ರದಲ್ಲೇ ಅವರನ್ನು ಭೇಟಿಯಾಗಿ ಪ್ರಮುಖ ವಿಚಾರಗಳ ಬಗ್ಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.
ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ:
ರಾಜ್ಯದಲ್ಲಿ ವಾಡಿಕೆ ಮಳೆಯ ಶೇ.60ರಷ್ಟು ಮಾತ್ರ ಮಳೆಯಾಗಿದೆ. ಪರಿಣಾಮವಾಗಿ ಜಲಾಶಯಗಳಲ್ಲಿ ಶೇ.50ರಿಂದ 55ರಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದ ಕುಡಿಯುವ ನೀರಿನ ಅಗತ್ಯವನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚಿಸಿರುವುದು ಆತಂಕಕಾರಿ ಎಂದು ದೇವೇಗೌಡರು ಪತ್ರದಲ್ಲಿ ವಿವರಿಸಿದ್ದಾರೆ.
ನೀರು ಬಿಡುಗಡೆ ಮುಂದುವರಿದರೆ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಮತ್ತಷ್ಟು ಕುಸಿಯುವ ಸಾಧ್ಯತೆಯಿದೆ. ಹೀಗಾಗಿ ತಮಿಳುನಾಡಿನ ನೀರಾವರಿ ಅಗತ್ಯಕ್ಕಿಂತ ಕರ್ನಾಟಕದ ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಾವೇರಿ ತೀರ್ಪಿನ ಮರುಪರಿಶೀಲನೆಗೆ ಒತ್ತಾಯ:
1990ರಲ್ಲಿ ತಮಿಳುನಾಡಿಗೆ ವಾರ್ಷಿಕ 205 ಟಿಎಂಸಿ ನೀರು ನಿಗದಿಪಡಿಸಿದ್ದಕ್ಕೆ ತಾವು ಆಕ್ಷೇಪ ವ್ಯಕ್ತಪಡಿಸಿದ್ದಾಗಿ ದೇವೇಗೌಡರು ತಿಳಿಸಿದ್ದಾರೆ. 2007ರ ಕಾವೇರಿ ಅಂತಿಮ ತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.
ಅಲ್ಲದೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೀಡಿರುವ ಅಧಿಕಾರಗಳು ಸಂವಿಧಾನಬಾಹಿರವಾಗಿವೆ ಎಂದು ಆಕ್ಷೇಪಿಸಿದ್ದು, ಸುಪ್ರೀಂಕೋರ್ಟ್ ಆದೇಶಕ್ಕೆ ಅನುಗುಣವಾಗಿ ಪ್ರಾಧಿಕಾರದ ಅಧಿಕಾರವನ್ನು ಸೀಮಿತಗೊಳಿಸುವಂತೆ ಮನವಿ ಮಾಡಿದ್ದಾರೆ. 36 ವರ್ಷಗಳಷ್ಟು ಹಳೆಯದಾದ ಕಾವೇರಿ ನ್ಯಾಯಮಂಡಳಿಯ ತೀರ್ಪನ್ನು ಮರುಪರಿಶೀಲಿಸುವಂತೆಯೂ ಆಗ್ರಹಿಸಿದ್ದಾರೆ.
ಮೇಕೆದಾಟು ಯೋಜನೆಗೆ ತುರ್ತು ಅನುಮೋದನೆಗೆ ಮನವಿ:
ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಮೇಕೆದಾಟು ಯೋಜನೆಯೇ ಪರಿಹಾರವಾಗಬಲ್ಲದು ಎಂದು ದೇವೇಗೌಡರು ಪ್ರತಿಪಾದಿಸಿದ್ದಾರೆ. ಹೀಗಾಗಿ ಯೋಜನೆಗೆ ಕೇಂದ್ರ ಜಲ ಆಯೋಗದಿಂದ (CWC) ತುರ್ತು ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.
ಇದರ ಜತೆಗೆ ಗೋದಾವರಿ-ಕೃಷ್ಣಾ-ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕಕ್ಕೆ ಕೇವಲ 15.9 ಟಿಎಂಸಿ ನೀರು ಹಂಚಿಕೆಯಾಗಿರುವುದನ್ನು ಪ್ರಸ್ತಾಪಿಸಿದ್ದಾರೆ. ಈ ಯೋಜನೆಯಲ್ಲಿ ರಾಜ್ಯಕ್ಕೆ ನ್ಯಾಯಯುತವಾಗಿ ಹೆಚ್ಚಿನ ನೀರಿನ ಪಾಲು ನೀಡುವಂತೆ ಆಗ್ರಹಿಸಿದ್ದಾರೆ.









