ಬೆಂಗಳೂರು: ರಾಜ್ಯದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಕಬ್ಬಿನ ಖರೀದಿ, ಕಟಾವು, ಸಾಗಣೆ ಹಾಗೂ ರೈತರಿಗೆ ಸಕಾಲದಲ್ಲಿ ಹಣ ಪಾವತಿಸುವ ವಿಚಾರದಲ್ಲಿ ನ್ಯಾಯಸಮ್ಮತ ಮತ್ತು ಪಾರದರ್ಶಕ ವ್ಯವಸ್ಥೆ ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರವು ರೈತರು, ಸಕ್ಕರೆ ಕಾರ್ಖಾನೆಗಳು ಮತ್ತು ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹಲವು ನೀತಿ ನಿರ್ಧಾರಗಳನ್ನು ಕೈಗೊಂಡಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ನಿಗದಿಪಡಿಸುವುದು, ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಎಥೆನಾಲ್ ನೀತಿಯಡಿ ಅಗತ್ಯ ನೆರವು ನೀಡುವುದು ಸೇರಿದಂತೆ ಹಲವು ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಅಲ್ಲದೆ, ಎಥೆನಾಲ್ ಬಡ್ಡಿ ಸಹಾಯಧನ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತಿದೆ. ರೈತರು, ಸಕ್ಕರೆ ಕಾರ್ಖಾನೆಗಳು ಹಾಗೂ ಇತರ ಪಾಲುದಾರರ ಸಮಸ್ಯೆಗಳನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚಿಸುವ ಮೂಲಕ ರೈತರ ಹಿತಾಸಕ್ತಿ ಕಾಪಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಜೋಶಿ ವಿವರಿಸಿದ್ದಾರೆ.
ಕೇಂದ್ರ ಸರ್ಕಾರದ ಕ್ರಮಗಳಿಂದಾಗಿ 2024-25ನೇ ಸಕ್ಕರೆ ಹಂಗಾಮಿನವರೆಗಿನ ಕಬ್ಬಿನ ಬಾಕಿ ಮೊತ್ತದಲ್ಲಿ ಶೇ.99.8ರಷ್ಟು ಪಾವತಿಯಾಗಿದೆ. ಇನ್ನು 2025-26ನೇ ಸಕ್ಕರೆ ಹಂಗಾಮಿನಲ್ಲಿ ಪಾವತಿಸಬೇಕಿದ್ದ ಒಟ್ಟು 1,14,958 ಕೋಟಿ ರೂ. ಮೊತ್ತದಲ್ಲಿ 1,13,325 ಕೋಟಿ ರೂ. ಪಾವತಿಸಲಾಗಿದೆ. ಈ ಮೂಲಕ ಶೇ.99.6ರಷ್ಟು ಬಾಕಿ ಪಾವತಿ ಪೂರ್ಣಗೊಂಡಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಬ್ಬು ಬೆಳೆಗಾರರಿಗೆ ಸಕಾಲದಲ್ಲಿ ಹಣ ಪಾವತಿಸಲು ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವೂ ಆಡಳಿತಾತ್ಮಕ ಹಾಗೂ ಆರ್ಥಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇದಲ್ಲದೆ, ಮಹಾರಾಷ್ಟ್ರದ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಹ-ವಿದ್ಯುತ್ ಉತ್ಪಾದನೆಗೆ ಸಂಬಂಧಿಸಿದ ವಿದ್ಯುತ್ ಖರೀದಿ ಮತ್ತು ಮಾರಾಟ ಒಪ್ಪಂದಗಳ ಸಾಧ್ಯತೆಯನ್ನು ಪರಿಶೀಲಿಸುವಂತೆ ಪ್ರಹ್ಲಾದ್ ಜೋಶಿ ಸಲಹೆ ನೀಡಿದ್ದಾರೆ.










