ಮಡಿಕೇರಿ: ಕೊಡಗು ಜಿಲ್ಲೆಗೆ ಪ್ರವಾಸಕ್ಕೆ ಬರುವವರು ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್ಗೆ ಭೇಟಿ ನೀಡುವುದು ಸಾಮಾನ್ಯ.
ಇಲ್ಲಿನ ಹಚ್ಚಹಸಿರಿನ ಪ್ರಕೃತಿ ಸೌಂದರ್ಯ, ಮನಮೋಹಕ ಸೂರ್ಯಾಸ್ತದ ದೃಶ್ಯ, ಬಣ್ಣಬಣ್ಣದ ಕಾರಂಜಿ ಹಾಗೂ ಮಕ್ಕಳ ಉದ್ಯಾನವನ ಪ್ರವಾಸಿಗರನ್ನು ಆಕರ್ಷಿಸುತ್ತವೆ. ಆದರೆ ಇದೀಗ ರಾಜಾಸೀಟ್ಗೆ ಭೇಟಿ ನೀಡಲು ಬಯಸುವ ಪ್ರವಾಸಿಗರಿಗೆ ನಿರಾಸೆಯಾಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಮುಂದಿನ 15 ದಿನಗಳ ಕಾಲ ರಾಜಾಸೀಟ್ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
10 ವರ್ಷಗಳ ಬಳಿಕ ರಸ್ತೆ ಅಭಿವೃದ್ಧಿ ಕಾಮಗಾರಿ:
ಮಡಿಕೇರಿ ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ರಾಜಾಸೀಟ್ ರಸ್ತೆ ಕಳೆದ ಹಲವು ವರ್ಷಗಳಿಂದ ದುಸ್ಥಿತಿಯಲ್ಲಿತ್ತು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ರಾಜಾಸೀಟ್, ಹೊಸ ಬಸ್ ನಿಲ್ದಾಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಗೆ ಕಳೆದ 10 ವರ್ಷಗಳಿಂದ ಸಮರ್ಪಕ ಡಾಂಬರೀಕರಣ ನಡೆದಿರಲಿಲ್ಲ. ಆಗಾಗ್ಗೆ ತೇಪೆ ಹಾಕುವ ಮೂಲಕ ದುರಸ್ತಿ ಕಾರ್ಯ ನಡೆಸಲಾಗುತ್ತಿತ್ತು.
ಕಳೆದ ಒಂದು ವರ್ಷದಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಸಂಚರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದರು. ರಸ್ತೆಯ ದುಸ್ಥಿತಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಸಾಕಷ್ಟು ಚರ್ಚೆ ನಡೆದಿತ್ತು. ಇದೀಗ ಜಿಲ್ಲಾಡಳಿತ ರಸ್ತೆ ಅಭಿವೃದ್ಧಿಗೆ ಮುಂದಾಗಿದ್ದು, ಜಿಲ್ಲಾಧಿಕಾರಿ ಕಚೇರಿಯ ಹೆಬ್ಬಾಗಿಲಿನಿಂದ ಕುಂದುರುಮೊಟ್ಟೆ ದೇವಾಲಯದವರೆಗೆ ಸುಮಾರು ಒಂದು ಕಿಲೋಮೀಟರ್ ಉದ್ದದ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಲಾಗುತ್ತಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಪ್ರವಾಸಿಗರಿಗೆ ನಿರಾಸೆ, ವ್ಯಾಪಾರಕ್ಕೂ ಹೊಡೆತ:
ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯದವರೆಗೆ ರಾಜಾಸೀಟ್ ಪ್ರವೇಶಕ್ಕೂ ನಿರ್ಬಂಧ ವಿಧಿಸಲಾಗಿದೆ. ಇದರಿಂದ ಮಕ್ಕಳ ಉದ್ಯಾನವನ, ಬಣ್ಣದ ಕಾರಂಜಿ ಹಾಗೂ ಸೂರ್ಯಾಸ್ತದ ಸೊಬಗನ್ನು ಕಣ್ತುಂಬಿಕೊಳ್ಳಲು ಬರುವ ಪ್ರವಾಸಿಗರು ನಿರಾಸೆ ಅನುಭವಿಸುವಂತಾಗಿದೆ.
ಸುಮಾರು 15 ದಿನಗಳ ಕಾಲ ಪ್ರವಾಸಿ ತಾಣಕ್ಕೆ ಪ್ರವೇಶ ನಿರ್ಬಂಧಿಸಿರುವುದಕ್ಕೆ ಸ್ಥಳೀಯರಿಂದ ಆಕ್ಷೇಪ ವ್ಯಕ್ತವಾಗಿದೆ. ರಸ್ತೆ ಕಾಮಗಾರಿಗೆ ಅಗತ್ಯವಿರುವಷ್ಟು ದಿನ ಮಾತ್ರ ನಿರ್ಬಂಧ ವಿಧಿಸಬಹುದಿತ್ತು ಎಂಬ ಅಭಿಪ್ರಾಯವೂ ಕೇಳಿಬಂದಿದೆ. ಇನ್ನು ರಾಜಾಸೀಟ್ ರಸ್ತೆಯಲ್ಲಿರುವ ಅಂಗಡಿ ಮುಂಗಟ್ಟುಗಳ ವ್ಯಾಪಾರಕ್ಕೂ ಈ ನಿರ್ಬಂಧದಿಂದ ಹೊಡೆತ ಬಿದ್ದಿದೆ.
11 ಅತ್ತಿ ಮರಗಳ ತೆರವಿಗೆ ಪರಿಸರ ಪ್ರೇಮಿಗಳ ವಿರೋಧ:
ಇದರ ನಡುವೆ ರಸ್ತೆ ಅಭಿವೃದ್ಧಿಗಾಗಿ ರಸ್ತೆಯ ಬದಿಯಲ್ಲಿರುವ 11 ಅತ್ತಿ ಮರಗಳನ್ನು ತೆರವುಗೊಳಿಸಲು ಮುಂದಾಗಿರುವುದು ಪರಿಸರ ಪ್ರೇಮಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಮರಗಳನ್ನು ಕಡಿಯುವ ಬದಲು ಅವುಗಳನ್ನು ಉಳಿಸಿಕೊಂಡೇ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸಬೇಕು ಎಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.
ಒಟ್ಟಿನಲ್ಲಿ, ಮಡಿಕೇರಿಯ ಪ್ರಮುಖ ಪ್ರವಾಸಿ ತಾಣವಾದ ರಾಜಾಸೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿರುವುದು ಸ್ಥಳೀಯರಲ್ಲಿ ನಿರೀಕ್ಷೆ ಮೂಡಿಸಿದ್ದರೂ, ತಾತ್ಕಾಲಿಕ ಪ್ರವೇಶ ನಿರ್ಬಂಧ, ವ್ಯಾಪಾರಿಗಳಿಗೆ ಉಂಟಾಗಿರುವ ನಷ್ಟ ಹಾಗೂ ಮರಗಳ ತೆರವು ವಿಚಾರಗಳು ಚರ್ಚೆಗೆ ಕಾರಣವಾಗಿವೆ. ಕಾಮಗಾರಿ ಪೂರ್ಣಗೊಂಡ ಬಳಿಕ ಸುಗಮ ರಸ್ತೆ ಸಂಚಾರಕ್ಕೆ ಅನುಕೂಲವಾಗುವ ನಿರೀಕ್ಷೆಯಲ್ಲಿ ಸ್ಥಳೀಯರಿದ್ದಾರೆ.









