ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ಶಾಸಕ ಪ್ರದೀಪ್ ಈಶ್ವರ್ ಹಾಗೂ ಅವರ ಪತ್ನಿ ನಯನ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಕುಟುಂಬಕ್ಕೆ ಪುಟ್ಟ ಮಹಾಲಕ್ಷ್ಮಿಯ ಆಗಮನವಾಗಿದೆ.
ತಂದೆಯಾದ ಸಂತಸದ ಸುದ್ದಿಯನ್ನು ಶಾಸಕ ಪ್ರದೀಪ್ ಈಶ್ವರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ನವಜಾತ ಹೆಣ್ಣು ಮಗುವನ್ನು ಕೈಯಲ್ಲಿ ಎತ್ತಿಕೊಂಡು ಮುದ್ದಾಡುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿರುವ ಅವರು, ಜೀವನದ ವಿಶೇಷ ಕ್ಷಣದ ಸಂತಸವನ್ನು ಅಭಿಮಾನಿಗಳು ಹಾಗೂ ಹಿತೈಷಿಗಳೊಂದಿಗೆ ಹಂಚಿಕೊಂಡಿದ್ದಾರೆ.
ತಾಯಿ-ಮಗು ಆರೋಗ್ಯವಾಗಿದ್ದಾರೆ
ತಾಯಿ ನಯನ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಪ್ರದೀಪ್ ಈಶ್ವರ್ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಶಾಸಕರು ತಂದೆಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿತೈಷಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಪ್ರದೀಪ್ ಈಶ್ವರ್ ಮತ್ತು ನಯನ ದಂಪತಿಗೆ ಪುಟ್ಟ ಮಹಾಲಕ್ಷ್ಮಿಯ ಆಗಮನವಾಗಿರುವುದಕ್ಕೆ ಹಲವರು ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸುತ್ತಿದ್ದಾರೆ.









