ಬೆಂಗಳೂರು: ಗಾಂಜಾ ಸೇವನೆಯ ಹಿನ್ನೆಲೆಯಲ್ಲಿ ಯುವಕರ ಗುಂಪೊಂದು ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಶಂಕಿತ ಘಟನೆ ನಗರದ ಗಿರಿನಗರದ ವೀರಭದ್ರ ಸಿಗ್ನಲ್ ಬಳಿ ನಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುವನ್ನು ಪಾದರಾಯನಪುರ ನಿವಾಸಿ ಮಹಮ್ಮದ್ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಸುಮಾರು 6.30ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಯುವಕರ ಗುಂಪು ಮಹಮ್ಮದ್ ಅವರ ಕೈಕಾಲುಗಳನ್ನು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ವ್ಯಕ್ತಿ ಬಿದ್ದಿದ್ದ ಸ್ಥಳದ ಸಮೀಪ ನಿರ್ಜನ ಪ್ರದೇಶವಿದ್ದು, ಅಲ್ಲಿಂದ ಕೆಳಗೆ ತಳ್ಳಿರುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಮಹಮ್ಮದ್ ಅವರನ್ನು ಪೊಲೀಸರು ತಕ್ಷಣ ಆಸ್ಪತ್ರೆಗೆ ರವಾನಿಸಿದ್ದಾರೆ.
ಶೇ.70ರಷ್ಟು ಸುಟ್ಟ ಗಾಯ: ಡಿಸಿಪಿ ಮಾಹಿತಿ
ಘಟನೆ ಕುರಿತು ದಕ್ಷಿಣ ವಿಭಾಗದ ಡಿಸಿಪಿ ಡಾ. ಕೆ. ವಂಶಿಕೃಷ್ಣ ಮಾಹಿತಿ ನೀಡಿದ್ದು, ಬೆಳಗ್ಗೆ ಸುಮಾರು 6.30ರ ವೇಳೆಗೆ ಘಟನೆ ನಡೆದಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿದಾಗ ವ್ಯಕ್ತಿ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
ಗುಡ್ಡದ ಮೇಲೆ ಗಾಂಜಾ ಸೇವನೆ ಪತ್ತೆ
ಘಟನೆ ನಡೆದ ಸ್ಥಳದ ಸಮೀಪದ ಗುಡ್ಡದ ಮೇಲೆ ಕೆಲವರು ಗಾಂಜಾ ಸೇವಿಸಿರುವುದು ಪತ್ತೆಯಾಗಿದೆ. ಅಲ್ಲಿಯೇ ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದಿರುವ ಸಾಧ್ಯತೆಯಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ತನಿಖೆ ಮುಂದುವರಿದಿದೆ. ಘಟನೆಯ ಹಿಂದಿನ ಕಾರಣ ಹಾಗೂ ಕೃತ್ಯದಲ್ಲಿ ಭಾಗಿಯಾಗಿರುವವರ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.









