ಚಿಕ್ಕಬಳ್ಳಾಪುರ: ಕಾರು ಮತ್ತು ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ.
ನಂದಿಗಿರಿಧಾಮ ಪೊಲೀಸ್ ಠಾಣೆ ಎದುರು ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಕಡೆಗೆ ಐವರು ಯುವಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರನ್ನು ಜಗದೀಶ್ ಮತ್ತು ವೈಷ್ಣವ್ ಎಂದು ಗುರುತಿಸಲಾಗಿದ್ದು, ಇವರು ಬೆಂಗಳೂರಿನ ಯಲಹಂಕ ಮೂಲದವರು ಎಂದು ತಿಳಿದುಬಂದಿದೆ.
ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಯುವಕನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೊಲೆರೊ ವಾಹನದಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.









