ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಾನವ–ಕಾಡಾನೆ ಸಂಘರ್ಷ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೊಬ್ಬ ಕೃಷಿಕ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಹೆನ್ನಂಗಿ ಗ್ರಾಮದ ಕೃಷಿಕ ಕೃಷ್ಣಮೂರ್ತಿ (ನ.18) ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ಈ ಘಟನೆಗೆ ಆಕ್ರೋಶ ವ್ಯಕ್ತಪಡಿಸಿರುವ ರೈತರು ಹಾಗೂ ಸ್ಥಳೀಯರು ಎನ್.ಆರ್.ಪುರ ಬಂದ್ಗೆ ಕರೆ ನೀಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೃಷ್ಣಮೂರ್ತಿ ಅವರು ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿ ಹೆಚ್ಚುತ್ತಿದ್ದು, ರೈತರು ಹಾಗೂ ಸಾರ್ವಜನಿಕರು ಆತಂಕದಲ್ಲಿ ಜೀವನ ನಡೆಸುವಂತಾಗಿದೆ.
ಘಟನೆಯ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಮೃತದೇಹವನ್ನು ಸಾಗಿಸಲು ಮುಂದಾಗಿದ್ದರು. ಆದರೆ ಮೂಡಬಾಗಿಲು ಸಮೀಪ ಅಂಬುಲೆನ್ಸ್ ತಡೆದ ಗ್ರಾಮಸ್ಥರು, ಮೃತದೇಹವನ್ನು ಹೆನ್ನಂಗಿ ಗ್ರಾಮಕ್ಕೆ ವಾಪಸ್ ಕಳುಹಿಸುವಂತೆ ಒತ್ತಾಯಿಸಿದ್ದಾರೆ.
ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಆನೆಗಳು ಅರಣ್ಯದಿಂದ ನಾಡಿನತ್ತ ಬಾರದಂತೆ ಸೂಕ್ತ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ತೋಟ ಹಾಗೂ ಗದ್ದೆಗಳಿಗೆ ತೆರಳಲು ಕೂಡ ರೈತರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ರೀತಿ ಮುಂದುವರಿದರೆ ಮತ್ತಷ್ಟು ಪ್ರಾಣಹಾನಿ ಸಂಭವಿಸುವ ಆತಂಕವಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









