ಬೆಂಗಳೂರು: ಬಸವಣ್ಣನವರ ಬಗ್ಗೆ ಅವಹೇಳನಕಾರಿ ಪುಸ್ತಕ ಬರೆದಿರುವ ಹಾಗೂ ವಿಡಿಯೋಗಳನ್ನು ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ವಿಚಾರವಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಸಚಿವರು, ಬಸವಣ್ಣನವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಿರುವುದು ಖಂಡನೀಯ. ಬಸವಣ್ಣನವರು ನಮ್ಮ ನಾಡಿನ ಸಾಂಸ್ಕೃತಿಕ ನಾಯಕರು. ಇತಿಹಾಸದ ಬಗ್ಗೆ ಸರಿಯಾದ ತಿಳಿವಳಿಕೆ ಇಲ್ಲದವರು ತಮ್ಮ ಸ್ವಾರ್ಥಕ್ಕಾಗಿ ಇತಿಹಾಸವನ್ನು ತಿರುಚುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುಸ್ತಕ ಮುಟ್ಟುಗೋಲು ಅಥವಾ ನಿಷೇಧದ ಬಗ್ಗೆ ಚರ್ಚೆ
ಬಸವಣ್ಣನವರ ಬಗ್ಗೆ ಅವಹೇಳನಕಾರಿ ಬರಹಗಳನ್ನು ಪ್ರಕಟಿಸಿರುವ ಕೃತಿಯ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಲಾಗುವುದು ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ.
ಸಂಬಂಧಪಟ್ಟ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೇ ಅಥವಾ ಸಂಪೂರ್ಣವಾಗಿ ನಿಷೇಧಿಸಬೇಕೇ ಎಂಬ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.









