ಬೆಂಗಳೂರು: ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಬೇಡಿಕೆ ಕುರಿತು ಹಿರಿಯ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಇದೇ ವೇಳೆ ಪ್ರತಿಭಟನೆ ಕೈಬಿಟ್ಟು ಮನೆಗಳಿಗೆ ಮರಳುವಂತೆ ಆಶಾ ಕಾರ್ಯಕರ್ತೆಯರಿಗೆ ಮನವಿ ಮಾಡಿದ್ದಾರೆ.
ಸರ್ಕಾರದ ಅಧಿಕೃತ ನಿವಾಸ ಗಂಗಾದಲ್ಲಿ ಮಧ್ಯಾಹ್ನದ ಭೋಜನಕೂಟದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದರು. ಆದರೆ, ಬೇಡಿಕೆಗಳನ್ನು ಈಡೇರಿಸುವ ಕುರಿತು ಯಾವುದೇ ಅಂತಿಮ ಭರವಸೆ ನೀಡದೆ, ಸಮಾಲೋಚನೆ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ 41 ಸಾವಿರ ಆಶಾ ಕಾರ್ಯಕರ್ತೆಯರು
ರಾಜ್ಯದಲ್ಲಿ ಸುಮಾರು 41 ಸಾವಿರ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಈ ಯೋಜನೆ ಆರಂಭವಾಗಿದ್ದು, ಆರಂಭದಲ್ಲಿ ಕಾರ್ಯಕರ್ತೆಯರಿಗೆ 200 ರೂ. ನೀಡಲಾಗುತ್ತಿತ್ತು. ಈಗ ರಾಜ್ಯ ಸರ್ಕಾರದಿಂದ 5,000 ರೂ. ಹಾಗೂ ಕೇಂದ್ರ ಸರ್ಕಾರದಿಂದ 2,000 ರೂ. ನೀಡಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ವಿವರಿಸಿದ್ದಾರೆ.
ಕೇಂದ್ರ ಸರ್ಕಾರ ನೀಡುವ ಮೊತ್ತಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವೂ ಹಣ ನೀಡುವ ಕುರಿತು ಒಪ್ಪಂದ ಮಾಡಿಕೊಂಡಿತ್ತು. ಆದರೆ, ಕೇಂದ್ರ ಸರ್ಕಾರ ತನ್ನ ಪಾಲಿನ ಮೊತ್ತವನ್ನು ಹೆಚ್ಚಿಸಿಲ್ಲ. ರಾಜ್ಯ ಸರ್ಕಾರ ಈಗ ನೀಡುತ್ತಿರುವ 5,000 ರೂ. ಜೊತೆಗೆ 1,000 ರೂ. ಪ್ರೋತ್ಸಾಹಧನ ನೀಡುತ್ತಿದೆ. ಒಟ್ಟಾರೆ ಆಶಾ ಕಾರ್ಯಕರ್ತೆಯರಿಗೆ 8,000 ರೂ. ದೊರೆಯುತ್ತಿದೆ ಎಂದು ಅವರು ಹೇಳಿದ್ದಾರೆ.
15 ಸಾವಿರ ರೂ. ವೇತನಕ್ಕೆ ಬೇಡಿಕೆ
ಆಶಾ ಕಾರ್ಯಕರ್ತೆಯರು ಈಗ 15 ಸಾವಿರ ರೂ. ವೇತನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳ ಕುರಿತು ವಾಸ್ತವಾಂಶಗಳನ್ನು ತಿಳಿಸಿದ್ದು, ರಾಜ್ಯದಲ್ಲಿ ಇತರ ವರ್ಗಗಳ ಬೇಡಿಕೆಗಳೂ ಇವೆ ಎಂಬುದನ್ನು ಮನವರಿಕೆ ಮಾಡಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸಭಾ ಅಧಿವೇಶನದ ವೇಳೆಗೆ ಹಿರಿಯ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಿ, ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಪ್ರತಿಭಟನೆ ವಾಪಸ್ ಪಡೆಯುವಂತೆ ಮನವಿ
ಆಶಾ ಕಾರ್ಯಕರ್ತೆಯರು ಸರ್ಕಾರದ ಮೇಲೆ ವಿಶ್ವಾಸ ಇಟ್ಟು ಪ್ರತಿಭಟನೆ ವಾಪಸ್ ಪಡೆಯಬೇಕು ಎಂದು ಮನವಿ ಮಾಡಿರುವ ಡಿಕೆ ಶಿವಕುಮಾರ್, ಅವರು ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ ಮತ್ತು ಸರ್ಕಾರದ ಬಗ್ಗೆ ಸಹಾನುಭೂತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಪ್ರತಿಭಟನೆ ಕೈಬಿಟ್ಟು ತಮ್ಮ ಮನೆಗಳಿಗೆ ಮರಳುವಂತೆ ಮನವಿ ಮಾಡಿದ್ದು, ಅವರ ಬೇಡಿಕೆಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆಶಾ ಕಾರ್ಯಕರ್ತೆಯರು ಇನ್ನಷ್ಟು ಬೇಡಿಕೆಗಳನ್ನು ಮುಂದಿಟ್ಟಿದ್ದು, ಅವುಗಳ ಕುರಿತು ಗೃಹ ಸಚಿವರು ಚರ್ಚಿಸಲಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.










