ರಾಮನಗರ: ಶಾಲೆಯಲ್ಲಿ ಸಹಪಾಠಿಗಳೊಂದಿಗೆ ಗಲಾಟೆ ಮಾಡಿಕೊಂಡಿದ್ದಕ್ಕೆ ಶಿಕ್ಷಕರು ಬೈದು, ಪೋಷಕರನ್ನು ಕರೆಸುವುದಾಗಿ ಎಚ್ಚರಿಕೆ ನೀಡಿದ್ದಕ್ಕೆ ಹೆದರಿದ ಹತ್ತನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ರಾತ್ರೋರಾತ್ರಿ ವಸತಿ ಶಾಲೆಯಿಂದ ಪರಾರಿಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಶಾಲೆಯ ಕಾಂಪೌಂಡ್ ಗೋಡೆ ಹಾರಿ ಹೊರಹೋಗಿರುವ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ರಾಮನಗರ ಟೌನ್ನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಿನ್ನೆ ರಾತ್ರಿ ಏಕಾಏಕಿ ಶಾಲೆಯಿಂದ ನಾಪತ್ತೆಯಾಗಿದ್ದಾರೆ. ಕಾಣೆಯಾದವರ ಪೈಕಿ ಇಬ್ಬರು ರಾಮನಗರದವರಾಗಿದ್ದು, ಮತ್ತಿಬ್ಬರು ಬೆಂಗಳೂರಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.
ಶಿಕ್ಷಕರ ಎಚ್ಚರಿಕೆಗೆ ಹೆದರಿ ಹಾಸ್ಟೆಲ್ನಿಂದ ಪರಾರಿ!
ನಾಲ್ವರು ವಿದ್ಯಾರ್ಥಿಗಳು ಶಾಲೆಯಲ್ಲಿ ಸಹಪಾಠಿಗಳೊಂದಿಗೆ ಗಲಾಟೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ವಿಚಾರ ತಿಳಿದ ಶಿಕ್ಷಕರು ವಿದ್ಯಾರ್ಥಿಗಳನ್ನು ಕರೆದು ಬುದ್ಧಿವಾದ ಹೇಳಿದ್ದರು. ಅಲ್ಲದೆ, ಗಲಾಟೆಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲು ಶಾಲೆಗೆ ಕರೆಸುವುದಾಗಿ ಎಚ್ಚರಿಕೆ ನೀಡಿದ್ದರು.
ಪೋಷಕರಿಗೆ ತಮ್ಮ ಗಲಾಟೆಯ ವಿಚಾರ ತಿಳಿಯುತ್ತದೆ ಎಂಬ ಭಯದಿಂದ ವಿದ್ಯಾರ್ಥಿಗಳು ವಸತಿ ಶಾಲೆಯಿಂದ ಪರಾರಿಯಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮುಖ್ಯ ಗೇಟ್ ಬಳಿ ಭದ್ರತಾ ಸಿಬ್ಬಂದಿ ಇದ್ದ ಕಾರಣ, ಶಾಲೆಯ ಕಾಂಪೌಂಡ್ ಗೋಡೆ ಹಾರಿ ನಾಲ್ವರೂ ಹೊರಹೋಗಿದ್ದಾರೆ.
ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಾಂಶುಪಾಲೆ:
ರಾತ್ರಿ ಶಾಲೆಯಿಂದ ಹೊರಹೋದ ವಿದ್ಯಾರ್ಥಿಗಳು ಮರುದಿನ ಸಂಜೆಯಾದರೂ ವಾಪಸ್ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ವಸತಿ ಶಾಲೆಯ ಪ್ರಾಂಶುಪಾಲೆ ರೂಪ ಅವರು ರಾಮನಗರದ ಐಜೂರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾಗಿರುವ ನಾಲ್ವರು ವಿದ್ಯಾರ್ಥಿಗಳನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಕರೆತರುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳಿಗಾಗಿ ಪೊಲೀಸರ ಹುಡುಕಾಟ:
ಪ್ರಕರಣ ದಾಖಲಿಸಿಕೊಂಡಿರುವ ಐಜೂರು ಠಾಣೆ ಪೊಲೀಸರು ವಿದ್ಯಾರ್ಥಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ವಿದ್ಯಾರ್ಥಿಗಳು ಎಲ್ಲಿಗೆ ತೆರಳಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
ಒಟ್ಟಿನಲ್ಲಿ, ಸಣ್ಣ ಗಲಾಟೆಯ ವಿಚಾರಕ್ಕೆ ಶಿಕ್ಷಕರು ಪೋಷಕರನ್ನು ಕರೆಸುವುದಾಗಿ ಹೇಳಿದ್ದಕ್ಕೆ ಹೆದರಿ ನಾಲ್ವರು ವಿದ್ಯಾರ್ಥಿಗಳು ವಸತಿ ಶಾಲೆಯಿಂದಲೇ ಪರಾರಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮಕ್ಕಳ ಸುರಕ್ಷತೆ ಕುರಿತು ಪೋಷಕರು ಕಳವಳ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳು ಆದಷ್ಟು ಬೇಗ ಪತ್ತೆಯಾಗಲಿ ಎಂಬ ನಿರೀಕ್ಷೆಯಲ್ಲಿದ್ದಾರೆ.








