ಮಂಡ್ಯ: ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರ ಪತ್ನಿ ಪ್ರಮೀಳಾ ಅವರು ಗುರುವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇಂದು (ನವೆಂಬರ್ 20) ಬೆಳಗ್ಗೆ ಬೆಂಗಳೂರಿನ ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕರು ಹಾಗೂ ಆಪ್ತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಸಂಜೆ 4 ಗಂಟೆಗೆ ಮೃತದೇಹವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅವರ ಸ್ವಗ್ರಾಮ ದೊಡ್ಡರಸಿನಕೆರೆಗೆ ಕೊಂಡೊಯ್ಯಲಾಗುತ್ತದೆ.
ಶನಿವಾರ ಬೆಳಗ್ಗೆ 11 ಗಂಟೆಯವರೆಗೆ ದೊಡ್ಡರಸಿನಕೆರೆಯಲ್ಲಿ ಗ್ರಾಮಸ್ಥರು, ಅಭಿಮಾನಿಗಳು ಹಾಗೂ ಗಣ್ಯರಿಗೆ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನಂತರ ಕುಟುಂಬದ ಸಂಪ್ರದಾಯದಂತೆ ಸ್ವಗ್ರಾಮದಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇನ್ನು ಪ್ರಮೀಳಾ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬೀಗರಾಗಿದ್ದರು. ಅವರ ನಿಧನಕ್ಕೆ ಜೆಡಿಎಸ್ ನಾಯಕರು, ಗಣ್ಯರು ಹಾಗೂ ಕುಟುಂಬಸ್ಥರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.









