ನವದೆಹಲಿ: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರಿಂದ ಓಲಾ, ಉಬರ್, ರ್ಯಾಪಿಡೋ ಸೇರಿದಂತೆ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಹಾಗೂ ಈ ಸೇವೆಯನ್ನು ಅವಲಂಬಿಸಿರುವ ಪ್ರಯಾಣಿಕರಿಗೆ ನಿರಾಳತೆ ಸಿಕ್ಕಿದೆ.
ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ತೀರ್ಪು ಪ್ರಕಟಿಸಿದೆ. ರಾಜ್ಯ ಸರ್ಕಾರದ ಜೊತೆಗೆ ಬೈಕ್ ಟ್ಯಾಕ್ಸಿ ಸೇವೆಗೆ ವಿರೋಧ ವ್ಯಕ್ತಪಡಿಸಿದ್ದ ಆಟೋ ಮತ್ತು ಟ್ಯಾಕ್ಸಿ ಸಂಘಟನೆಗಳಿಗೂ ಇದರಿಂದ ಹಿನ್ನಡೆಯಾಗಿದೆ.
‘ಆಟೋ ದರ ಐದು ಪಟ್ಟು ಹೆಚ್ಚಿರುತ್ತದೆ’
ತೀರ್ಪು ಪ್ರಕಟಿಸುವ ವೇಳೆ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರು ಬೈಕ್ ಟ್ಯಾಕ್ಸಿಗಳ ಕೈಗೆಟುಕುವ ದರದ ಮಹತ್ವವನ್ನು ಪ್ರಸ್ತಾಪಿಸಿದರು. ತಮ್ಮ ಕಚೇರಿಯಲ್ಲಿ ಕೆಲಸ ಮಾಡುವ ಕೆಲವು ಯುವತಿಯರೊಂದಿಗೆ ನಡೆದ ಸಂಭಾಷಣೆಯನ್ನು ಅವರು ನ್ಯಾಯಾಲಯದಲ್ಲಿ ಉಲ್ಲೇಖಿಸಿದರು.
‘ನೀವು ಕಚೇರಿಗೆ ಹೇಗೆ ಬರುತ್ತೀರಿ?’ ಎಂದು ಕೇಳಿದಾಗ, ಕ್ಯಾಬ್ ಬಾಡಿಗೆಗೆ ಪಡೆಯಲು ಹಣವಿಲ್ಲದ ಕಾರಣ ಬೈಕ್ ಟ್ಯಾಕ್ಸಿಯಲ್ಲಿ ಬರುತ್ತೇವೆ ಎಂದು ಅವರು ಉತ್ತರಿಸಿದ್ದರು. ಆಟೋದಲ್ಲಿ ಏಕೆ ಬರುವುದಿಲ್ಲ ಎಂದು ಪ್ರಶ್ನಿಸಿದಾಗ, ‘ಸರ್, ಆಟೋ ದರ ಐದು ಪಟ್ಟು ಹೆಚ್ಚಾಗಿರುತ್ತದೆ’ ಎಂದು ಹೇಳಿದ್ದಾಗಿ ನ್ಯಾಯಮೂರ್ತಿ ಸ್ಮರಿಸಿಕೊಂಡರು.
ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್
ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಸೂಕ್ತ ನಿಯಮಾವಳಿ ರೂಪಿಸುವವರೆಗೆ ಅವುಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಈ ಹಿಂದೆ ಹೈಕೋರ್ಟ್‌ನ ಏಕಸದಸ್ಯ ಪೀಠ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಓಲಾ, ಉಬರ್, ರ್ಯಾಪಿಡೋ, ಬೈಕ್ ಮಾಲೀಕರು ಹಾಗೂ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘ ಮೇಲ್ಮನವಿ ಸಲ್ಲಿಸಿದ್ದವು.
2026ರ ಜನವರಿ 23ರಂದು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಬೈಕ್ ಟ್ಯಾಕ್ಸಿಗಳ ಮೇಲಿನ ನಿರ್ಬಂಧ ತೆರವುಗೊಳಿಸಿತ್ತು.
ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಿ, ಕಾಂಟ್ರಾಕ್ಟ್ ಕ್ಯಾರೇಜ್‌ಗಳಾಗಿ ಕಾರ್ಯಾಚರಣೆ ನಡೆಸಬಹುದು. ಸರ್ಕಾರ ನಿಯಂತ್ರಣಾತ್ಮಕ ಷರತ್ತುಗಳನ್ನು ವಿಧಿಸಬಹುದೇ ಹೊರತು, ಕೇವಲ ದ್ವಿಚಕ್ರ ವಾಹನ ಎಂಬ ಕಾರಣಕ್ಕೆ ಪರವಾನಗಿ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು.
ಪ್ರಯಾಣಿಕರ ಸುರಕ್ಷತೆ ಬಗ್ಗೆ ರಾಜ್ಯ ಸರ್ಕಾರದ ವಾದ
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕ ಸರ್ಕಾರ, ಪ್ರಯಾಣಿಕರ ಸುರಕ್ಷತೆ, ವಿಮಾ ಸೌಲಭ್ಯದ ಕೊರತೆ ಹಾಗೂ 2019ರ ತಜ್ಞರ ಸಮಿತಿಯ ವರದಿಯನ್ನು ಉಲ್ಲೇಖಿಸಿತ್ತು.
ರಾಜ್ಯದ ಇತರೆ ಭಾಗಗಳಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡುವ ಬಗ್ಗೆ ಪರಿಶೀಲಿಸಬಹುದಾದರೂ, ಬೆಂಗಳೂರಿನ ಸಂಚಾರ ದಟ್ಟಣೆಯ ಹಿನ್ನೆಲೆಯಲ್ಲಿ ಈ ಸೇವೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರ ವಾದಿಸಿತ್ತು. ಐದು ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳೂ ಸರ್ಕಾರದ ನಿಲುವಿಗೆ ಬೆಂಬಲವಾಗಿ ಮೇಲ್ಮನವಿ ಸಲ್ಲಿಸಿದ್ದವು.
4.5 ಲಕ್ಷ ಪ್ರಯಾಣಿಕರಿಗೆ ಸೇವೆ
ವಿಚಾರಣೆ ವೇಳೆ ಕಾರುಗಳಿಗೆ ಹೋಲಿಸಿದರೆ ಬೈಕ್‌ಗಳು ರಸ್ತೆಯಲ್ಲಿ ಕಡಿಮೆ ಜಾಗವನ್ನು ಆಕ್ರಮಿಸುತ್ತವೆ ಎಂಬ ಅಂಶವನ್ನೂ ಸುಪ್ರೀಂಕೋರ್ಟ್ ಗಮನಿಸಿತ್ತು. ಬೈಕ್ ಟ್ಯಾಕ್ಸಿಗಳ ಕಡಿಮೆ ದರದ ಬಗ್ಗೆಯೂ ನ್ಯಾಯಪೀಠ ಪ್ರಸ್ತಾಪಿಸಿತ್ತು.
ರಾಜ್ಯದಲ್ಲಿ ಸುಮಾರು 4.5 ಲಕ್ಷ ಪ್ರಯಾಣಿಕರು ಬೈಕ್ ಟ್ಯಾಕ್ಸಿ ಸೇವೆ ಪಡೆಯುತ್ತಿದ್ದಾರೆ ಎಂದು ಅಗ್ರಿಗೇಟರ್‌ಗಳ ಪರ ವಕೀಲರು ವಾದಿಸಿದ್ದರು. 2004 ಮತ್ತು 2024ರ ಕೇಂದ್ರ ಸರ್ಕಾರದ ಅಧಿಸೂಚನೆಗಳ ಪ್ರಕಾರ ದ್ವಿಚಕ್ರ ವಾಹನಗಳನ್ನು ಟ್ಯಾಕ್ಸಿಗಳಾಗಿ ಬಳಸಲು ಅವಕಾಶವಿದೆ ಎಂದು ಕೇಂದ್ರ ಸರ್ಕಾರವೂ ನ್ಯಾಯಪೀಠಕ್ಕೆ ತಿಳಿಸಿತ್ತು.
ಎರಡೂ ಕಡೆಯ ವಾದಗಳನ್ನು ಆಲಿಸಿದ ಸುಪ್ರೀಂಕೋರ್ಟ್, ಕರ್ನಾಟಕ ಸರ್ಕಾರ ಮತ್ತು ಆಟೋ ಸಂಘಟನೆಗಳ ಮೇಲ್ಮನವಿಗಳನ್ನು ವಜಾಗೊಳಿಸಿದೆ. ಈ ಮೂಲಕ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸಲು ಇದ್ದ ಕಾನೂನು ಅಡೆತಡೆ ನಿವಾರಣೆಯಾಗಿದೆ.
ಕರ್ನಾಟಕ ಸರ್ಕಾರದ ಪರವಾಗಿ ಹಿರಿಯ ವಕೀಲರಾದ ವಿಕಾಸ್ ಸಿಂಗ್ ಮತ್ತು ಪರಾಗ್ ತ್ರಿಪಾಠಿ ವಾದ ಮಂಡಿಸಿದ್ದರು. ಉಬರ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ಓಲಾ ಪರವಾಗಿ ಲುಥ್ರಾ ಮತ್ತು ಲುಥ್ರಾ ಕಾನೂನು ತಂಡ ಪ್ರತಿನಿಧಿಸಿತ್ತು.









