ಬೆಂಗಳೂರು: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಆರೋಪಿಗಳಿಗೆ ಕಾನೂನು ಸಂಕಷ್ಟ ಎದುರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಕೃಪಾ ಆಳ್ವಾ, ಜೆಡಿಎಸ್ ಸಾಮಾಜಿಕ ಜಾಲತಾಣ ಕಾರ್ಯಕರ್ತ ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್, ವಿನೋದ್ ಕುಮಾರ್ ಹಾಗೂ ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಸೇರಿದಂತೆ ಆರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.
ಆದರೆ, ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿ ಅರ್ಜಿಗಳನ್ನು ವಜಾಗೊಳಿಸಿದೆ. ಇದರಿಂದ ಆರೋಪಿಗಳಿಗೆ ಬಂಧನದ ಭೀತಿ ಎದುರಾಗಿದೆ.
ಈ ಪ್ರಕರಣದಲ್ಲಿ ಕೃಪಾ ಆಳ್ವಾ ಈಗಾಗಲೇ ಪೊಲೀಸ್ ವಿಚಾರಣೆ ಎದುರಿಸುತ್ತಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ನ್ಯಾಯಾಲಯ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆ ಇದೆ ಎಂಬ ಚರ್ಚೆ ಶುರುವಾಗಿದೆ.










