ಗದಗ: ಗದಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿ, ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳಿಗೆ 250 ಕೋಟಿ ರೂ. ಅನುದಾನ ದೊರೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ ಹಾಗೂ ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ರಾಜ್ಯಕ್ಕೆ ಒಟ್ಟು 16 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಈ ಪೈಕಿ ಗದಗ ಜಿಲ್ಲೆಗೆ 250 ಕೋಟಿ ರೂ. ದೊರೆಯಲಿದೆ ಎಂದರು.
ಜಿಲ್ಲೆಯ ಹದಗೆಟ್ಟ ರಸ್ತೆಗಳು ಹಾಗೂ ಮಣ್ಣಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗುವುದು. ರಸ್ತೆ ಕಾಮಗಾರಿಗಳ ಗುಣಮಟ್ಟ ಖಾತರಿಪಡಿಸಲು ಮೂರು ಹಂತಗಳಲ್ಲಿ ತಪಾಸಣೆ ನಡೆಸಿ, ಆಡಿಟ್ ಮಾಡಿಸಲಾಗುತ್ತದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಮೂರು ವರ್ಷಗಳ ನಿರ್ವಹಣೆಯ ಜವಾಬ್ದಾರಿಯನ್ನು ಗುತ್ತಿಗೆದಾರರಿಗೆ ವಹಿಸಲಾಗುವುದು ಎಂದು ತಿಳಿಸಿದರು.
ಕಾಮಗಾರಿಗಳನ್ನು 15 ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಅಧಿಕಾರ ಕಲ್ಪಿಸಲಾಗಿದೆ. ಕೆಆರ್ಐಡಿಎಲ್ ಹಾಗೂ ನಿರ್ಮಿತಿ ಕೇಂದ್ರಗಳ ಮೂಲಕ ಸಿಸಿ ರಸ್ತೆ, ಚರಂಡಿ ಮತ್ತು ಕುಡಿಯುವ ನೀರು ಪೂರೈಕೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಸರ್ಕಾರದಲ್ಲಿ ಅನುದಾನದ ಕೊರತೆಯಿಲ್ಲ. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗುವುದು ಎಂದರು.
ವಿಬಿಜಿ-ರಾಮ್ಜಿ ಯೋಜನೆಯಡಿ 375 ಬಗೆಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಆದರೆ, ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಾನವ ದಿನಗಳ ಸೃಜನೆಯಾಗಿಲ್ಲ. ಗ್ರಾಮಸಭೆಗಳನ್ನು ನಡೆಸಿ ಯೋಜನೆಯ ಕುರಿತು ಜನರಲ್ಲಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಮುಂದಿನ ಒಂಬತ್ತು ತಿಂಗಳ ಅವಧಿಗೆ 9 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಪ್ರತಿ ತಿಂಗಳು 1,000 ಕೋಟಿ ರೂ. ವೆಚ್ಚ ಮಾಡಲು ಅವಕಾಶವಿದೆ. ರಾಜ್ಯದಲ್ಲಿ ಬಸ್ ತಂಗುದಾಣಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಕನಿಷ್ಠ 50 ಬಸ್ ತಂಗುದಾಣಗಳನ್ನು ನಿರ್ಮಿಸುವಂತೆ ಸೂಚಿಸಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.










