ಗುಜರಾತ್: ಗುಜರಾತ್ನ ಕಚ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಮೃತರಲ್ಲಿ ಮೂವರು ಪುಟ್ಟ ಮಕ್ಕಳು ಸೇರಿದ್ದಾರೆ.
ಭುಜ್-ಖಾವ್ಡಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ. ವೇಕಾರಿಯಾ ರಣ್ ಸಮೀಪ ಕಾರು ಮತ್ತು ಟ್ರೈಲರ್ ಲಾರಿ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪಲ್ಟಿಯಾಗಿ ರಸ್ತೆ ಮೇಲೆ ಬಿದ್ದಿದೆ.
ಅಪಘಾತದಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಹಲವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರೆಲ್ಲರೂ ಉತ್ತರಾಖಂಡ ಮೂಲದ ಸೇನಾ ಯೋಧರೊಬ್ಬರ ಕುಟುಂಬದ ಸದಸ್ಯರು ಎನ್ನಲಾಗಿದೆ. ಭುಜ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇನಾ ಸಿಬ್ಬಂದಿಯ ಕುಟುಂಬಸ್ಥರು ಹಾಗೂ ಸಂಬಂಧಿಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.










