ಕೋಲಾರ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವಾಲಿಬಾಲ್ ತರಬೇತುದಾರನನ್ನು ಪೊಲೀಸರು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಶಿಕುಮಾರ್ ಬಂಧಿತ ಆರೋಪಿ. ಈತ ಶಾಲೆಯೊಂದರಲ್ಲಿ ವಾಲಿಬಾಲ್ ತರಬೇತುದಾರನಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಇದೇ ಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಇತ್ತೀಚೆಗೆ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ವಿಚಾರಿಸಿದಾಗ, ತರಬೇತುದಾರನಿಂದ ಲೈಂಗಿಕ ದೌರ್ಜನ್ಯ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಬಳಿಕ ಬಾಲಕಿಯ ಅಜ್ಜಿ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಶಶಿಕುಮಾರ್ಗಾಗಿ ಹುಡುಕಾಟ ನಡೆಸಿದ್ದರು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇದೀಗ ಬಂಧಿಸಿ ವಶಕ್ಕೆ ಪಡೆದಿದ್ದಾರೆ.
ಸದ್ಯ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.









