ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದಿದ್ದರೆ, ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಹಲವು ಪತ್ರಗಳನ್ನು ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕೇಂದ್ರದಿಂದ ಸ್ಪಂದನೆ ಸಿಗದಿದ್ದರೆ ಮುಂದೇನು ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು.
ಹಿಂದೆ ಕೇಂದ್ರ ಸರ್ಕಾರ ಪರಿಹಾರ ನೀಡದ ಸಂದರ್ಭದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದೇವೆ. ಅಲ್ಲಿಯೂ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದೆವು. ನ್ಯಾಯಾಲಯದ ನಿರ್ದೇಶನದ ಬಳಿಕ ₹3,500 ಕೋಟಿ ಪರಿಹಾರ ಬಿಡುಗಡೆಯಾಗಿತ್ತು. ಈ ಬಾರಿ ಅದೇ ರೀತಿಯ ಪರಿಸ್ಥಿತಿ ಎದುರಾಗುತ್ತದೆ ಎಂದು ನಾವು ನಿರೀಕ್ಷಿಸುತ್ತಿಲ್ಲ. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸುವ ವಿಶ್ವಾಸವಿದೆ. ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರದ ತಂಡ ಈಗಾಗಲೇ ವರದಿ ಸಲ್ಲಿಸಿದ್ದು, ಕೇಂದ್ರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಈ ಕುರಿತು ಚರ್ಚಿಸುವ ಸಾಧ್ಯತೆಯಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಬರ ಪರಿಹಾರಕ್ಕಾಗಿ ಕೇಂದ್ರದಿಂದ ₹22 ಸಾವಿರ ಕೋಟಿ ನೆರವು ಕೇಳಿದೆ. ಕೇಂದ್ರ ಸರ್ಕಾರ ಸ್ವಯಂಪ್ರೇರಿತವಾಗಿ ಪರಿಹಾರ ನೀಡಿದರೆ ಸಂತೋಷವಾಗುತ್ತದೆ. ಈಗಾಗಲೇ ರಾಜ್ಯ ಸರ್ಕಾರ ರೈತರಿಗೆ ₹5 ಸಾವಿರ ಪರಿಹಾರ ನೀಡುವ ಪ್ರಕ್ರಿಯೆ ಆರಂಭಿಸಿದೆ. ವಿಧಾನಮಂಡಲದ ಅಧಿವೇಶನ ಆರಂಭವಾಗುವ ಮುನ್ನ ರೈತರಿಗೆ ಹಣ ತಲುಪಿಸುವ ಉದ್ದೇಶವಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. ಪರಿಹಾರ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.
ಬರ ಪರಿಸ್ಥಿತಿ ಯಾರಿಂದಲೂ ಸೃಷ್ಟಿಯಾಗಿಲ್ಲ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯದ ರೈತರ ನೆರವಿಗೆ ನಿಲ್ಲಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವುದು ಸರಿಯಲ್ಲ. ರಾಜಕೀಯ ಮಾಡಬೇಕಾದ ವಿಚಾರಗಳಲ್ಲಿ ರಾಜಕೀಯ ಮಾಡೋಣ, ಆದರೆ ರೈತರ ಸಂಕಷ್ಟದ ಸಂದರ್ಭದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಪರಮೇಶ್ವರ್ ಹೇಳಿದರು.
ರಾಜ್ಯ ಸರ್ಕಾರ ರೈತರಿಗೆ ₹2,500 ಕೋಟಿ ನೆರವು ನೀಡುತ್ತಿದೆ. ಇದು ಸಣ್ಣ ಮೊತ್ತವಲ್ಲ. ರೈತರ ಸಂಕಷ್ಟಕ್ಕೆ ಎಲ್ಲರೂ ಸ್ಪಂದಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದರು. ಇದೇ ವೇಳೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್,
ಮುಖ್ಯಮಂತ್ರಿ ಈಗಾಗಲೇ ಆಶಾ ಕಾರ್ಯಕರ್ತೆಯರನ್ನು ಕರೆದು ಮಾತುಕತೆ ನಡೆಸಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಯವರೇ ಸಮಸ್ಯೆ ಪರಿಹರಿಸುವುದಾಗಿ ಹೇಳಿರುವುದರಿಂದ ಆಶಾ ಕಾರ್ಯಕರ್ತೆಯರು ಅವರ ಮಾತನ್ನು ನಂಬಬೇಕು. ಸರ್ಕಾರದ ಭರವಸೆಯ ಮೇಲೆ ವಿಶ್ವಾಸವಿಡಬೇಕು. ನಂಬಿಕೆ ಇಲ್ಲದಿದ್ದರೆ ಸಮಸ್ಯೆ ಪರಿಹಾರ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.










