ಬೆಂಗಳೂರು: ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿರುವ ನಡುವೆಯೇ ಮಳೆಯ ಮುನ್ಸೂಚನೆ ಕೂಡ ಎದುರಾಗಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಚಳಿಯ ನಡುವೆ ಮಳೆ ಎಚ್ಚರಿಕೆ:
ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರಿದಿದೆ. ಇದರ ನಡುವೆಯೇ ಮಳೆಯ ಮುನ್ಸೂಚನೆ ನೀಡಿರುವುದು ಜನರಲ್ಲಿ ಕುತೂಹಲ ಮೂಡಿಸಿದೆ. ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳ ಜನರು ಹವಾಮಾನದಲ್ಲಿನ ಬದಲಾವಣೆಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.









