ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳಿಂದ ಮುಂದೂಡಿಕೆಯಾಗಿದ್ದ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಕೊನೆಗೂ ಸಿದ್ಧತೆ ಆರಂಭವಾಗಿದೆ. 2027ರ ಜನವರಿಯಲ್ಲಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಜ್ಜಾಗಿದ್ದು, 1,101 ಜಿಲ್ಲಾ ಪಂಚಾಯಿತಿ ಹಾಗೂ 3,580 ತಾಲೂಕು ಪಂಚಾಯಿತಿ ಸ್ಥಾನಗಳಿಗೆ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಮತದಾನ ಬ್ಯಾಲೆಟ್ ಪೇಪರ್ ಅಂದರೆ ಮತಪತ್ರದ ಮೂಲಕ ನಡೆಯಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. 2027ರ ಜನವರಿಯಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಚುನಾವಣಾ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಲಿದೆ ಎಂದು ಹೇಳಿದ್ದಾರೆ.
ಯಾವ ಮತದಾರರ ಪಟ್ಟಿಯನ್ನು ಚುನಾವಣೆಗೆ ಬಳಸಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರ ಚುನಾವಣಾ ಆಯೋಗಕ್ಕಿದೆ. ಹಳೆಯ ಮತದಾರರ ಪಟ್ಟಿಯನ್ನೇ ಬಳಸುವಂತೆ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಅಂತಿಮ ನಿರ್ಧಾರ ಆಯೋಗಕ್ಕೆ ಸೇರಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ವಾಸ್ತವವಾಗಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ಅಧಿಕಾರಾವಧಿ 2022ರಲ್ಲೇ ಮುಕ್ತಾಯಗೊಂಡಿತ್ತು. ಆದರೆ ಕ್ಷೇತ್ರ ಮರುವಿಂಗಡಣೆ ಸೇರಿದಂತೆ ಹಲವು ಕಾರಣಗಳಿಂದ ಚುನಾವಣೆ ಮುಂದೂಡಿಕೆಯಾಗಿತ್ತು. ಹಲವು ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಲಾಗಿತ್ತು. ಕೆಲವು ಗ್ರಾಮೀಣ ಪ್ರದೇಶಗಳು ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಗೆ ಸೇರ್ಪಡೆಯಾಗಿದ್ದವು. ಹೀಗಾಗಿ ಪಂಚಾಯಿತಿ ಕ್ಷೇತ್ರಗಳ ಭೌಗೋಳಿಕ ಗಡಿಗಳನ್ನು ಮರುನಿಗದಿಪಡಿಸುವ ಅನಿವಾರ್ಯತೆ ಎದುರಾಗಿತ್ತು.
ಇದೀಗ ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಸರ್ಕಾರ ಪೂರ್ಣಗೊಳಿಸಿದೆ. ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ ಬಗ್ಗೆ ಸಚಿವ ಸಂಪುಟದಲ್ಲೂ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗಿದೆ.
ಇನ್ನು ಚುನಾವಣೆಯ ನಿಖರ ದಿನಾಂಕ, ವೇಳಾಪಟ್ಟಿ ಹಾಗೂ ನೀತಿ ಸಂಹಿತೆ ಜಾರಿಯ ಕುರಿತು ರಾಜ್ಯ ಚುನಾವಣಾ ಆಯೋಗ ಅಧಿಕೃತ ಘೋಷಣೆ ಮಾಡಬೇಕಿದೆ. ಆಯೋಗದ ಘೋಷಣೆಯ ಬಳಿಕ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ.
ಇನ್ನೊಂದೆಡೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಟಿಕೆಟ್ಗಾಗಿ ತಮ್ಮ ತಮ್ಮ ಪಕ್ಷಗಳ ನಾಯಕರನ್ನು ಸಂಪರ್ಕಿಸಲು ಆರಂಭಿಸಿದ್ದಾರೆ. ಹೀಗಾಗಿ 2027ರ ಜನವರಿಯಲ್ಲಿ ನಡೆಯಲಿರುವ ಪಂಚಾಯಿತಿ ಚುನಾವಣೆ ಇದೀಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.







