ಬೆಂಗಳೂರು: ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಅಂಶಗಳಿವೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರವಿ ಹಂಜ್ ಅವರ ‘ಬಸವ ಮಂಟಪ’ ಪುಸ್ತಕದ ವಿರುದ್ಧ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ಒಳಾಡಳಿತ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ಈ ಪುಸ್ತಕದಲ್ಲಿ ಬಸವಣ್ಣನವರನ್ನು ಕಳ್ಳ ಮತ್ತು ಕೊಲೆಗಾರನಂತೆ ಬಿಂಬಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿತ್ತು. ಪುಸ್ತಕದಲ್ಲಿನ ಕೆಲವು ವಿಚಾರಗಳು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದರ ಜೊತೆಗೆ ಸಮಾಜದಲ್ಲಿ ಅಶಾಂತಿ ಮತ್ತು ವಿವಿಧ ಪಂಗಡಗಳ ನಡುವೆ ದ್ವೇಷ ಹರಡುವ ಸಾಧ್ಯತೆಯಿದೆ ಎಂದು ಆಕ್ಷೇಪಿಸಲಾಗಿತ್ತು.
ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪುಸ್ತಕದ ವಿಚಾರವಾಗಿ ವ್ಯಾಪಕ ಪ್ರತಿಭಟನೆಗಳು ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಧಾರ್ಮಿಕ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಡಿಜಿ ಮತ್ತು ಐಜಿಪಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.
ಈ ವಿಚಾರ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆಗೆ ಬಂದಿದ್ದು, ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳುವ ಕುರಿತು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿತ್ತು. ಇದೀಗ BNSS-2023ರ ಕಲಂ 98(1)ರ ಅಡಿಯಲ್ಲಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಸರ್ಕಾರದ ಈ ನಿರ್ಧಾರದಿಂದ ‘ಬಸವ ಮಂಟಪ’ ಪುಸ್ತಕದ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.









