ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಡಿಯೋ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವೀರ್ಗೆ ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ನವೆಂಬರ್ 30ರಂದು ಬೆಳಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.
ಈ ಪ್ರಕರಣದ ತನಿಖೆಗೆ ಧನ್ವೀರ್ ಸಹಕರಿಸುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ (NBW) ಜಾರಿಯಾಗಿತ್ತು. ಈ ವಾರೆಂಟ್ ರದ್ದುಗೊಳಿಸುವಂತೆ ಕೋರಿ ನಟ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಅನೂಪ್ ಕುಮಾರ್, ನ್ಯಾಯಾಲಯವು ಈ ಹಿಂದೆ ವಾರೆಂಟ್ಗೆ ತಡೆ ನೀಡಿದ್ದರೂ ಧನ್ವೀರ್ ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ ಎಂದು ತಿಳಿಸಿದರು.
ಹೀಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ನಟನಿಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಸರ್ಕಾರದ ಪರ ವಕೀಲರ ವಾದವನ್ನು ಪರಿಗಣಿಸಿದ ನ್ಯಾಯಪೀಠ, ನವೆಂಬರ್ 30ರಂದು ಬೆಳಗ್ಗೆ 11 ಗಂಟೆಗೆ ಸಿಸಿಬಿ ಪೊಲೀಸರ ಮುಂದೆ ಹಾಜರಾಗಬೇಕು ಹಾಗೂ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಧನ್ವೀರ್ಗೆ ಸೂಚನೆ ನೀಡಿದೆ.







