ಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಇಂದು ಮಹತ್ವದ ದಿನವಾಗಿದೆ.
ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಕೊಲೆಯಾದ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.
ನ್ಯಾ. ಪ್ರಶಾಂತ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದ್ದು, ಇಂದು ಹೊರಬೀಳಲಿರುವ ಆದೇಶದ ಮೇಲೆ ಎಲ್ಲರ ಗಮನ ನೆಟ್ಟಿದೆ. ಈಗಾಗಲೇ ಎರಡು ಬಾರಿ ಜಾಮೀನು ರದ್ದಾಗಿರುವ ವಿನಯ್ ಕುಲಕರ್ಣಿ ಅವರಿಗೆ ಈ ತೀರ್ಪು ನಿರ್ಣಾಯಕವಾಗಲಿದೆ.
ಜೀವಾವಧಿ ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯ:
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, 2026ರ ಏಪ್ರಿಲ್ 15ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಯನ್ನು ದೋಷಿಗಳೆಂದು ಘೋಷಿಸಿತ್ತು. ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಮತ್ತೊಬ್ಬ ಆರೋಪಿ ಚನ್ನಕೇಶವ ಟಿಂಗರಿಕರ್ಗೆ ಏಳು ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಲಾಗಿತ್ತು.
ಈ ಆದೇಶವನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಜುಲೈ 31ರಂದು ಹೈಕೋರ್ಟ್ ಮೇಲ್ಮನವಿ ಇತ್ಯರ್ಥವಾಗುವವರೆಗೆ ಅವರ ಶಿಕ್ಷೆ ಹಾಗೂ ಅಪರಾಧ ನಿರ್ಣಯಕ್ಕೆ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು.
ಆದರೆ, ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ನಲ್ಲಿ ವಾದ-ಪ್ರತಿವಾದ:
ಸಿಬಿಐ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ವಾದ ಮಂಡಿಸಿದ್ದು, ಗಂಭೀರ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ ಅಮಾನತುಗೊಳಿಸುವಾಗ ಸುಪ್ರೀಂ ಕೋರ್ಟ್ನ ಹಿಂದಿನ ತೀರ್ಪುಗಳು ಹಾಗೂ ಕಾನೂನು ತತ್ವಗಳನ್ನು ಪಾಲಿಸಬೇಕೆಂದು ಹೇಳಿದ್ದಾರೆ. ಹೈಕೋರ್ಟ್ ವಿನಯ್ ಕುಲಕರ್ಣಿ ಅವರ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿರುವುದು ಸರಿಯಲ್ಲ ಎಂದು ವಾದಿಸಿದ್ದಾರೆ.
ಇನ್ನೊಂದೆಡೆ, ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ.
ಯೋಗೇಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಬೆಳವಣಿಗೆಗಳು:
- ಜೂನ್ 15, 2016: ಯೋಗೇಶ್ ಗೌಡ ಹತ್ಯೆ.
- 2019: ರಾಜ್ಯ ಸರ್ಕಾರದಿಂದ ಪ್ರಕರಣ ಸಿಬಿಐಗೆ ಹಸ್ತಾಂತರ.
- ನವೆಂಬರ್ 5, 2020: ವಿನಯ್ ಕುಲಕರ್ಣಿ ಬಂಧನ.
- ಆಗಸ್ಟ್ 2021: ಸುಪ್ರೀಂ ಕೋರ್ಟ್ನಿಂದ ಷರತ್ತುಬದ್ಧ ಜಾಮೀನು.
- ಮೇ 2023: ಧಾರವಾಡ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ.
- ಜೂನ್ 2025: ಸುಪ್ರೀಂ ಕೋರ್ಟ್ನಿಂದ ಮತ್ತೆ ಜಾಮೀನು ರದ್ದು.
- ಏಪ್ರಿಲ್ 15, 2026: 16 ಮಂದಿ ದೋಷಿಗಳೆಂದು ವಿಚಾರಣಾ ನ್ಯಾಯಾಲಯದ ತೀರ್ಪು.
- ಏಪ್ರಿಲ್ 17, 2026: ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ.
- ಮೇ 2026: ಶಾಸಕ ಸ್ಥಾನದಿಂದ ಅನರ್ಹತೆ.
- ಜುಲೈ 30-31, 2026: ಹೈಕೋರ್ಟ್ನಿಂದ ಶಿಕ್ಷೆ ಅಮಾನತು ಹಾಗೂ ಜಾಮೀನು.
- ಅಕ್ಟೋಬರ್ 2026: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ.
ಸದ್ಯ ಎರಡನೇ ಬಾರಿಗೆ ಜಾಮೀನಿನ ಮೇಲೆ ಹೊರಗಿರುವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ನ ತೀರ್ಪು ಅತ್ಯಂತ ಮಹತ್ವದ್ದಾಗಿದೆ. ಹೈಕೋರ್ಟ್ ನೀಡಿದ್ದ ಜಾಮೀನು ರದ್ದಾದರೆ ಅವರು ಮತ್ತೆ ಜೈಲು ಸೇರಬೇಕಾಗುತ್ತದೆ. ಹೀಗಾಗಿ ಇಂದು ಹೊರಬೀಳಲಿರುವ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ರಾಜಕೀಯ ವಲಯದಲ್ಲೂ ಕುತೂಹಲ ಹೆಚ್ಚಾಗಿದೆ.










