ಬೆಂಗಳೂರು: ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ.
ಮಾಸಿಕ ಗೌರವಧನವನ್ನು ₹15 ಸಾವಿರಕ್ಕೆ ಹೆಚ್ಚಿಸಬೇಕು ಹಾಗೂ ಈ ಕುರಿತು ಸರ್ಕಾರ ಲಿಖಿತ ಭರವಸೆ ನೀಡಬೇಕು ಎಂದು ಆಗ್ರಹಿಸಿರುವ ಕಾರ್ಯಕರ್ತೆಯರು, ಬೇಡಿಕೆ ಈಡೇರುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿರುವ ಆಶಾ ಕಾರ್ಯಕರ್ತೆಯರು ತಮ್ಮ ಪುಟ್ಟ ಮಕ್ಕಳೊಂದಿಗೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಮಳೆ, ಚಳಿ ಹಾಗೂ ಬಿಸಿಲನ್ನೂ ಲೆಕ್ಕಿಸದೆ ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ. ಪ್ರತಿಭಟನೆಯ ವೇಳೆ 15ರಿಂದ 20ಕ್ಕೂ ಹೆಚ್ಚು ಕಾರ್ಯಕರ್ತೆಯರು ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಇನ್ನು ನಿರಂತರ ಮಳೆಯಿಂದಾಗಿ ಫ್ರೀಡಂ ಪಾರ್ಕ್ನಲ್ಲಿ ಕೆಸರು ಹಾಗೂ ಕೊಚ್ಚೆ ನೀರು ತುಂಬಿಕೊಂಡಿದೆ. ಪ್ರತಿಭಟನಾಕಾರರಿಗೆ ಸಮರ್ಪಕ ವ್ಯವಸ್ಥೆ ಇಲ್ಲದ ಕಾರಣ ಹಲವರು ರಸ್ತೆ ಬದಿಯಲ್ಲೇ ಟಾರ್ಪಾಲ್ ಹಾಕಿಕೊಂಡು ರಾತ್ರಿ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಂಧಾನ ಸಭೆಗಳು ವಿಫಲ: ಲಿಖಿತ ಭರವಸೆಗೆ ಪಟ್ಟು:
ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯಗೊಳಿಸುವ ನಿಟ್ಟಿನಲ್ಲಿ ಈ ಹಿಂದೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಎರಡು ಸುತ್ತಿನ ಸಂಧಾನ ಸಭೆಗಳು ನಡೆದಿದ್ದರೂ ಯಾವುದೇ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಮುಖ್ಯಮಂತ್ರಿ ಅವರು ಜಪಾನ್ ಪ್ರವಾಸದಲ್ಲಿದ್ದಾಗಲೂ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕರ್ತೆಯರೊಂದಿಗೆ ಮಾತುಕತೆ ನಡೆಸಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದರು.
ಆದರೆ, ಕೇವಲ ಮೌಖಿಕ ಭರವಸೆಗಳಿಗೆ ಒಪ್ಪದ ಆಶಾ ಕಾರ್ಯಕರ್ತೆಯರು, ಗೌರವಧನ ಹೆಚ್ಚಳದ ಕುರಿತು ಸರ್ಕಾರದಿಂದ ಅಧಿಕೃತ ಲಿಖಿತ ಭರವಸೆ ಸಿಗಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮುಂದುವರಿದಿದ್ದು, ಸರ್ಕಾರದ ಮುಂದಿನ ನಿರ್ಧಾರದತ್ತ ಎಲ್ಲರ ಗಮನ ನೆಟ್ಟಿದೆ.









