ರಾಮನಗರ: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಹೋರಾಟ ತೀವ್ರಗೊಳಿಸಿರುವ ಬೆನ್ನಲ್ಲೇ, ದೇಶಾದ್ಯಂತ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,500 ರೂ. ಹೆಚ್ಚಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಮಂಜುನಾಥ್ ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರ ಹೋರಾಟದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೌರವಧನ ಹೆಚ್ಚಳದ ವಿಚಾರವಾಗಿ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು. ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವಂತೆ ಸಲಹೆ ನೀಡಿದ್ದೇನೆ ಎಂದರು.
ದೇಶದಾದ್ಯಂತ ಇರುವ ಆಶಾ ಕಾರ್ಯಕರ್ತೆಯರಿಗೆ 1,500 ರೂ. ಗೌರವಧನ ಹೆಚ್ಚಳ ಮಾಡುವ ಕುರಿತು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಈ ಪ್ರಸ್ತಾವನೆಯನ್ನು ಮಂಡಿಸಿ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಡಾ. ಮಂಜುನಾಥ್ ಮಾಹಿತಿ ನೀಡಿದರು.
ಇದೇ ವೇಳೆ ರಾಜ್ಯ ಸರ್ಕಾರವೂ ಆಶಾ ಕಾರ್ಯಕರ್ತೆಯರ ಗೌರವಯುತ ಬದುಕಿಗೆ ಅಗತ್ಯವಾದ ರೀತಿಯಲ್ಲಿ ಗೌರವಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತ್ಯೇಕ ರಾಜ್ಯದ ಬೇಡಿಕೆಗೆ ಡಾ. ಮಂಜುನಾಥ್ ವಿರೋಧ
ಇನ್ನೊಂದೆಡೆ, ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರತ್ಯೇಕ ರಾಜ್ಯದ ಕುರಿತು ನಡೆಸಿದ ಚರ್ಚೆಗೆ ಪ್ರತಿಕ್ರಿಯಿಸಿದ ಡಾ. ಮಂಜುನಾಥ್, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕೇವಲ ಅನುದಾನ ನೀಡಿದರೆ ಸಾಲದು. ಆ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಮುಖ್ಯ ಎಂದು ಹೇಳಿದರು.
ಪ್ರತ್ಯೇಕ ರಾಜ್ಯದ ಬೇಡಿಕೆ ಸರಿಯಾದ ಮಾರ್ಗವಲ್ಲ ಎಂದು ಅಭಿಪ್ರಾಯಪಟ್ಟ ಅವರು, ರಾಜ್ಯದ ಒಟ್ಟು ಆದಾಯದಲ್ಲಿ ಬೆಂಗಳೂರಿನ ಕೊಡುಗೆ ಶೇ.40ರಷ್ಟಿದೆ ಎಂದು ತಿಳಿಸಿದರು. ಬೆಂಗಳೂರು ಪ್ರತ್ಯೇಕವಾದರೆ ಅಭಿವೃದ್ಧಿಗೆ ಹಣ ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು.
ಅಧಿಕಾರದಲ್ಲಿದ್ದಾಗಲೇ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಂಡರೆ ಪ್ರತ್ಯೇಕತೆಯ ಭಾವನೆ ಮೂಡುವುದಿಲ್ಲ ಎಂದು ಡಾ. ಮಂಜುನಾಥ್ ತಿರುಗೇಟು ನೀಡಿದರು.









