ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಪಿಎ ನಾಗರಾಜ್ಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ಧನ್ವೀರ್ ಗೌಡ ಬುಧವಾರ ರಾತ್ರಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ನೋಟಿಸ್ ನೀಡಲಾಗಿತ್ತು. ಅದರಂತೆ ಧನ್ವೀರ್ ಪೊಲೀಸರ ಮುಂದೆ ಹಾಜರಾಗಿ ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.
ವಿಜಯಲಕ್ಷ್ಮಿ ಅವರೊಂದಿಗೆ ನಡೆದಿದ್ದ ಜಟಾಪಟಿಯ ಬಳಿಕ ಇದೇ ಮೊದಲ ಬಾರಿಗೆ ಧನ್ವೀರ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಚಾರಣೆ ಮುಗಿದ ಬಳಿಕ ರಾತ್ರಿ ಠಾಣೆಯಿಂದ ಹೊರಬಂದಿದ್ದಾರೆ.
ಈ ಹಿಂದೆ ತಮ್ಮ ವಿರುದ್ಧ ದಾಖಲಾಗಿದ್ದ ಮೂರು ಎಫ್ಐಆರ್ಗಳನ್ನು ರದ್ದುಪಡಿಸುವಂತೆ ಕೋರಿ ಧನ್ವೀರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಎಫ್ಐಆರ್ಗಳನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಇದೀಗ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.
ಧನ್ವೀರ್ ವಿರುದ್ಧ ರಾಜರಾಜೇಶ್ವರಿ ನಗರ, ಚಾಮರಾಜಪೇಟೆ ಹಾಗೂ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿವೆ. ಸದ್ಯ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಸಂಬಂಧ ವಿಚಾರಣೆ ಪೂರ್ಣಗೊಂಡಿದೆ.
ಇನ್ನುಳಿದ ಚಾಮರಾಜಪೇಟೆ ಮತ್ತು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ದೂರುಗಳ ವಿಚಾರಣೆಗೂ ಧನ್ವೀರ್ ಗೌಡ ಶೀಘ್ರದಲ್ಲೇ ಹಾಜರಾಗಬೇಕಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆಯಿದೆ.









