ಬೆಂಗಳೂರು: ರಾಜ್ಯದಲ್ಲಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಮುಂದುವರಿದಿದೆ.
ಇತ್ತೀಚೆಗಷ್ಟೇ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ, ಇದೀಗ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಕೆಲವು ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದೆ.
ಈ ವರ್ಗಾವಣೆ ಪಟ್ಟಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾಗಿದ್ದ ಎಂ. ಮಹೇಶ್ವರ ರಾವ್ ಅವರ ಹೆಸರು ಪ್ರಮುಖವಾಗಿ ಕಾಣಿಸಿಕೊಂಡಿದೆ. ಅವರಿಗೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಅಂಜುಮ್ ಪರ್ವೇಜ್ ಅವರಿಗೆ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಜೊತೆಗೆ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ. ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ಒಳಾಡಳಿತ (ಗೃಹ) ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
ಇನ್ನು ಡಾ. ಗಿರೀಶ್ ದಿಲೀಪ್ ಬಡೋಲೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕ ಹುದ್ದೆಯ ಜೊತೆಗೆ ಇ-ಆಡಳಿತ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ಎಸ್ ಆ್ಯಂಡ್ ಟಿ ಇಲಾಖೆಗಳ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಅಪರ್ಣಾ ರಮೇಶ್ ಅವರನ್ನು ವರ್ಗಾವಣೆ ಮಾಡಿ, ಬಿಎಂಟಿಸಿಯ ಮಾಹಿತಿ ತಂತ್ರಜ್ಞಾನ ವಿಭಾಗದ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.
ಇದೇ ವೇಳೆ ಕೃಷ್ಣ ಬಾಜಪೈ ಅವರನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ಆಡಳಿತಾತ್ಮಕ ಬದಲಾವಣೆಗಳು ವಿವಿಧ ಇಲಾಖೆಗಳ ಕಾರ್ಯನಿರ್ವಹಣೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ.







