ಶಿವಮೊಗ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ಮೆಸ್ಕಾಂ ಲೈನ್ಮ್ಯಾನ್ ಒಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಆಯನೂರು ಸಮೀಪ ನಡೆದಿದೆ.
ಕರ್ತವ್ಯ ಮುಗಿಸಿ ಬೈಕ್ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಹಿಟ್ ಆ್ಯಂಡ್ ರನ್ ಅಪಘಾತ ಸಂಭವಿಸಿದೆ.
ಮೃತರನ್ನು 30 ವರ್ಷದ ತಿರುಮಲೇಶ್ ರೆಡ್ಡಿ ಎಂದು ಗುರುತಿಸಲಾಗಿದೆ. ಇವರು ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಮೂಲದವರಾಗಿದ್ದು, ಹಾರನಹಳ್ಳಿ ಮೆಸ್ಕಾಂ ಶಾಖೆಯಲ್ಲಿ ಲೈನ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು.
ಮೈಸವಳ್ಳಿ-ವೀರಣ್ಣನಬೆನವಳ್ಳಿ ಭಾಗದಲ್ಲಿ ವಿದ್ಯುತ್ ದುರಸ್ತಿ ಕಾರ್ಯಕ್ಕಾಗಿ ತಿರುಮಲೇಶ್ ರೆಡ್ಡಿ ತೆರಳಿದ್ದರು. ಕೆಲಸ ಮುಗಿಸಿ ಬೈಕ್ನಲ್ಲಿ ವಾಪಸ್ ಬರುತ್ತಿದ್ದಾಗ ಆಯನೂರು ಬಳಿ ಅಪರಿಚಿತ ವಾಹನ ಅವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ವಾಹನ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಸದ್ಯ ಪರಾರಿಯಾದ ವಾಹನ ಮತ್ತು ಚಾಲಕನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









