ಚಿಕ್ಕಮಗಳೂರು: ಕಾಫಿ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಮಾಲೀಕನೊಬ್ಬ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.
ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಂದೂಕು ಹಿಡಿದು ಮಹಿಳಾ ಕಾರ್ಮಿಕರ ಮೇಲೂ ಹಲ್ಲೆ ನಡೆಸಿರುವ ಆರೋಪವಿದೆ.
ಎಸ್ಟೇಟ್ ಮಾಲೀಕ ಭರತ್ ಎಂಬಾತ ದೊಣ್ಣೆಯಿಂದ ಕಾರ್ಮಿಕರ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡು ಮೂಲದ ಕಾರ್ಮಿಕರು ಕೆಲಸ ಬಿಟ್ಟು ಬೇರೆಡೆಗೆ ತೆರಳುವುದಾಗಿ ಹೇಳಿದ್ದೇ ಗಲಾಟೆಗೆ ಕಾರಣ ಎನ್ನಲಾಗಿದೆ.
ಕಾರ್ಮಿಕರು ಮುಂಗಡವಾಗಿ ಪಡೆದಿದ್ದ ಹಣವನ್ನು ವಾಪಸ್ ನೀಡುವಂತೆ ಮಾಲೀಕ ಒತ್ತಾಯಿಸಿದ್ದಾನೆ. ಈ ಹಣವನ್ನು ಹಿಂದಿರುಗಿಸಲು ಕಾರ್ಮಿಕರು ಒಪ್ಪಿಕೊಂಡಿದ್ದರೂ, ಮಾಲೀಕ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳನ್ನೂ ಬಿಡದೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಲಾಗಿದೆ ಎಂಬ ದೂರೂ ಕೇಳಿಬಂದಿದೆ.
ಇನ್ನು ಹಲ್ಲೆಯಿಂದ ಗಾಯಗೊಂಡಿರುವ ಮೀನಾ ಎಂಬ ಮಹಿಳೆಯನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಬಳದ ಹಣದ ವಿಚಾರವಾಗಿ ಮಾತಿನ ಚಕಮಕಿ ನಡೆದು, ಎಸ್ಟೇಟ್ ಮಾಲೀಕ ಭರತ್ ಮನಬಂದಂತೆ ಹಲ್ಲೆ ನಡೆಸಿದ್ದಾನೆ ಎಂದು ಮೀನಾ ಆರೋಪಿಸಿದ್ದಾರೆ. ಇದೇ ವೇಳೆ ಕಿವಿಯಲ್ಲಿದ್ದ ಚಿನ್ನದ ಒಡವೆ ಕೂಡ ನಾಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ಘಟನೆ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ವಲಸೆ ಕಾರ್ಮಿಕರ ಮೇಲಿನ ದೌರ್ಜನ್ಯವನ್ನು ಗಂಭೀರವಾಗಿ ಪರಿಗಣಿಸಿ, ಎಸ್ಟೇಟ್ ಮಾಲೀಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.









