ಆನೇಕಲ್: ಆನೆ ದಂತಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಜಾಲವನ್ನು ಆನೇಕಲ್ ಪೊಲೀಸರು ಭೇದಿಸಿದ್ದಾರೆ.
ಕಾರ್ಯಾಚರಣೆ ವೇಳೆ ಏಳು ಆನೆ ದಂತಗಳನ್ನು ವಶಪಡಿಸಿಕೊಂಡಿದ್ದು, ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಪ್ರವಾಸಿ ತಾಣ ಮುತ್ಯಾಲಮಡುವು ಸಮೀಪ ಈ ಕಾರ್ಯಾಚರಣೆ ನಡೆದಿದೆ. ಬಂಧಿತರನ್ನು ತಮಿಳುನಾಡು ಮೂಲದ ಸತೀಶ್ವರನ್, ಶರತ್ ಕುಮಾರ್ ಮತ್ತು ಶಂಕರ್ ಎಂದು ಗುರುತಿಸಲಾಗಿದೆ.
ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ವನ್ಯಜೀವಿಗಳ ಬೇಟೆ, ಆನೆ ದಂತ ಹಾಗೂ ಜಿಂಕೆ ಮಾಂಸದ ಅಕ್ರಮ ಸಾಗಾಟ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಏಳು ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ.









