ಬೆಂಗಳೂರು: ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಮೂಲಕ ರಾಜಕೀಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ಸಿಗಲಿವೆ. ಆದರೆ ಈ ಅವಕಾಶಗಳು ರಾಜಕೀಯ ನಾಯಕರ ಕುಟುಂಬದವರಿಗೆ ಮಾತ್ರ ಸೀಮಿತವಾಗಬಾರದು. ಪಕ್ಷಕ್ಕಾಗಿ ದುಡಿಯುವ ಸಾಮಾನ್ಯ ಕಾರ್ಯಕರ್ತೆಯರಿಗೂ ಅವಕಾಶ ನೀಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯ ಲಾಭ ಹೊಸಬರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ತಲುಪಬೇಕು. ಮಹಿಳೆಯರು ರಾಜಕೀಯಕ್ಕೆ ಬಂದು ಕಲಿಯಬೇಕು, ಭಾಷಣ ಮಾಡಬೇಕು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಬೇಕು. ಮಹಿಳೆಯರು ಪುರುಷರಿಗಿಂತಲೂ ಬಲಿಷ್ಠರಾಗಿದ್ದು, ಎಲ್ಲ ಮಹಿಳೆಯರಿಗೂ ರಾಜಕೀಯದಲ್ಲಿ ಅವಕಾಶ ಸಿಗಬೇಕು ಎಂದು ಅಭಿಪ್ರಾಯಪಟ್ಟರು.
ಮಹಿಳಾ ಮೀಸಲಾತಿ ಮಸೂದೆ ಕಳೆದ 30 ವರ್ಷಗಳಿಂದ ಬಾಕಿ ಉಳಿದಿತ್ತು. 1996ರಿಂದ ಹಲವು ಬಾರಿ ಸಂಸತ್ತಿನಲ್ಲಿ ಮಸೂದೆ ಮಂಡಿಸಲು ಪ್ರಯತ್ನಿಸಲಾಗಿತ್ತು. ಆದರೆ ರಾಜಕೀಯ ಇಚ್ಛಾಶಕ್ತಿಯ ಕೊರತೆ ಹಾಗೂ ವಿವಿಧ ಪಕ್ಷಗಳ ವಿರೋಧದಿಂದಾಗಿ ಅದು ಜಾರಿಗೆ ಬಂದಿರಲಿಲ್ಲ. ಅಂತಿಮವಾಗಿ 2023ರ ಸೆಪ್ಟೆಂಬರ್ನಲ್ಲಿ ಮಸೂದೆಗೆ ಸಂಸತ್ತಿನ ಅನುಮೋದನೆ ದೊರೆತಿದ್ದು, ರಾಷ್ಟ್ರಪತಿಗಳೂ ಅಂಕಿತ ಹಾಕಿದ್ದಾರೆ ಎಂದು ತಿಳಿಸಿದರು.
1976ರಲ್ಲಿ ನಡೆದ ಕ್ಷೇತ್ರ ಪುನರ್ವಿಂಗಡಣೆ ವೇಳೆ 54 ಕೋಟಿ ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳನ್ನು ನಿಗದಿಪಡಿಸಲಾಗಿತ್ತು. ಇದೀಗ ದೇಶದ ಜನಸಂಖ್ಯೆ 140 ಕೋಟಿಗೆ ಏರಿಕೆಯಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಅಂಗೀಕಾರವಾದರೆ ಲೋಕಸಭಾ ಕ್ಷೇತ್ರಗಳ ಸಂಖ್ಯೆ 850ಕ್ಕೆ ಏರಿಕೆಯಾಗುವ ಸಾಧ್ಯತೆಯಿದ್ದು, ಹೆಚ್ಚುವರಿ ಕ್ಷೇತ್ರಗಳಲ್ಲಿ ಮಹಿಳಾ ಮೀಸಲಾತಿ ಜಾರಿಯಾಗಲಿದೆ. ಹೀಗಾಗಿ ರಾಜಕೀಯ ಪಕ್ಷಗಳು ಹಾಗೂ ಪುರುಷರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಇದೇ ವೇಳೆ, ಸಂಸದರಿಗೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಸಂಸತ್ ಅಧಿವೇಶನದ ದಿನಗಳನ್ನು ಹೆಚ್ಚಿಸಲಿ, ವಿರೋಧ ಪಕ್ಷಗಳಿಗೆ ಹೆಚ್ಚಿನ ಚರ್ಚೆಯ ಅವಕಾಶ ನೀಡಲಾಗುವುದು. ಆದರೆ ವಿರೋಧ ಪಕ್ಷಗಳು ಎಷ್ಟು ಬಾರಿ ಚರ್ಚೆಯಲ್ಲಿ ಭಾಗವಹಿಸಿವೆ? ಅನಗತ್ಯ ಧರಣಿಗಳ ಮೂಲಕ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಟೀಕಿಸಿದರು.









