ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ? ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಬೆನ್ನಲ್ಲೇ ಶಮಿ ಅವರ ರಾಜಕೀಯ ಪ್ರವೇಶದ ಕುರಿತು ಚರ್ಚೆಗಳು ಜೋರಾಗಿವೆ.
ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿರುವ ಮೊಹಮ್ಮದ್ ಶಮಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಕುನ್ವರ್ ಬಸಿತ್ ಅಲಿ ಕೂಡ ಉಪಸ್ಥಿತರಿದ್ದರು.
ಶಮಿ ಅವರ ಈ ಭೇಟಿಯ ಬೆನ್ನಲ್ಲೇ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆದರೆ ಬಿಜೆಪಿ ಸೇರ್ಪಡೆ ಕುರಿತು ಶಮಿ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲೂ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.
ಬಿಜೆಪಿಗೆ ಸೇರಿದ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್!
ಇತ್ತೀಚೆಗಷ್ಟೇ ಮತ್ತೊಬ್ಬ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಬಿಜೆಪಿ ಸೇರ್ಪಡೆಯಾಗಿದ್ದರು. ಪಕ್ಷದ ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಗೆ ವಿಶೇಷ ಆಹ್ವಾನಿತರಾಗಿ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದಲ್ಲಿ ಜವಾಬ್ದಾರಿ ನೀಡಿದ್ದಕ್ಕಾಗಿ ಬಿಜೆಪಿ ಹೈಕಮಾಂಡ್ಗೆ ಚಾಹಲ್ ಕೃತಜ್ಞತೆ ಸಲ್ಲಿಸಿದ್ದರು.
ಇದಾದ ಒಂದು ವಾರದ ಅಂತರದಲ್ಲೇ ಮೊಹಮ್ಮದ್ ಶಮಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.
ಟೆಸ್ಟ್ ಕ್ರಿಕೆಟ್ಗೆ ಶಮಿ ವಿದಾಯ;
ಭಾರತದ ಪ್ರಮುಖ ವೇಗದ ಬೌಲರ್ಗಳಲ್ಲಿ ಒಬ್ಬರಾಗಿರುವ ಮೊಹಮ್ಮದ್ ಶಮಿ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. 2013ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಶಮಿ, ತಮ್ಮ ವೃತ್ತಿಜೀವನದಲ್ಲಿ 64 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ.
ಈ ಅವಧಿಯಲ್ಲಿ 229 ವಿಕೆಟ್ಗಳನ್ನು ಕಬಳಿಸಿದ್ದು, ಆರು ಬಾರಿ ಐದು ವಿಕೆಟ್ಗಳ ಗೊಂಚಲು ಪಡೆದ ಸಾಧನೆ ಮಾಡಿದ್ದಾರೆ.
ಕ್ರಿಕೆಟ್ನಿಂದ ನಿವೃತ್ತಿಯ ಬಳಿಕ ಶಮಿ ಅವರ ಮುಂದಿನ ನಡೆ ಏನು ಎಂಬ ಕುತೂಹಲದ ನಡುವೆಯೇ ಬಿಜೆಪಿ ಅಧ್ಯಕ್ಷರೊಂದಿಗಿನ ಭೇಟಿ ರಾಜಕೀಯ ಪ್ರವೇಶದ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿದೆ.









