ನುಡಿದಂತೆ ನಡೆದ ಸರ್ಕಾರ ನಮ್ಮದು

0
cm
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ಮಹಾದಾಯಿ, ಕಳಸಾ ಬಂಡೂರಿ ನಾಲಾ ಯೋಜನೆ ಈ ಭಾಗದ ಜನರ ಬಹುದಿನಗಳ ಕನಸಾಗಿದೆ. ಕೇಂದ್ರದ ಪರಿಸರ ಮಂಡಳಿಯು ಅನುಮತಿ ನೀಡಿದರೆ ನಾಳೆಯಿಂದಲೇ ಕಳಸಾ ಬಂಡೂರಿ ನಾಲಾ ಯೋಜನೆ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಶನಿವಾರ ನವಲಗುಂದದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಸಹಯೋಗದಲ್ಲಿ ನವಲಗುಂದ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮಾಡಲಾಗಿದೆ. ಶಂಕುಸ್ಥಾಪನೆ ಕಲ್ಲುಗಳನ್ನು ನೋಡಿದರೆ ಗೊತ್ತಾಗಲಿದೆ ಅಭಿವೃದ್ಧಿ ಕಾರ್ಯಗಳು ರಾಜ್ಯದಲ್ಲಿ ನಡೆಯುತ್ತಿವೆ ಎಂಬುದು. ಅಲ್ಲದೇ ಇಂದು ೧೩೮೫ ಜನ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುತ್ತಿದೆ. ಎನ್.ಎಚ್. ಕೋನರೆಡ್ಡಿ ಅವರು ಹಿಂದಿನ ಅವಧಿಯಲ್ಲಿ ರೂ. ೩ ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದರು.

೨೦೧೩ರಿಂದ ೨೦೧೮ರವರೆಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿತ್ತು. ೧೬೫ ಭರವಸೆಗಳಲ್ಲಿ ೧೫೮ ಭರವಸೆಗಳನ್ನು ಈಡೇರಿಸಲಾಗಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ವಾರಸುದಾರರು ಎಂದು ತಿಳಿಸಿದರು.

ಶಾಸಕ ಎನ್.ಎಚ್. ಕೋನರಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನವಲಗುಂದ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಅಂದಾಜು ರೂ. ೨೦೦ ಕೋಟಿ ವೆಚ್ಚದಲ್ಲಿ ೬೨ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಭೂಮಿ ಪೂಜೆ ಮಾಡಲಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು. ಮಹಾದಾಯಿ-ಕಳಸಾ ಬಂಡೂರಿ ಯೋಜನೆ ಈ ಭಾಗದ ಜನರ ಬಹು ದಿನಗಳ ಕನಸಾಗಿದೆ. ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕಾಗಿದೆ. ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನು ಮಾಡಲು ಪಣ ತೊಟ್ಟಿದ್ದೇನೆ ಎಂದರು.

navalagunda

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ೫೦ ಹೊಸ ಬಸ್‌ಗಳಿಗೆ ಚಾಲನೆ ನೀಡಿದರು. ಸಾಂಕೇತಿಕವಾಗಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಇಂಧನ ಸಚಿವ ಕೆ.ಜೆ. ಜಾರ್ಜ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಹುಬ್ಬಳ್ಳಿ-ಧಾರವಾಡ ಶಾಸಕ ಅಬ್ಬಯ್ಯ ಪ್ರಸಾದ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

program

ಶಂಕುತಲಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಶಂಭಯ್ಯ ಹಿರೇಮಠ ತಂಡದವರು ರೈತಗೀತೆ ಹಾಡಿದರು. ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸ್ವಾಗತಿಸಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಿದರು.

ಬಸವಾದಿ ಶರಣರು ನುಡಿದಂತೆ ನಡೆದವರು. ಅವರ ಹಾದಿಯಲ್ಲಿ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅಧಿಕಾರಕ್ಕೆ ಬಂದ ೮ ತಿಂಗಳಲ್ಲೇ ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬಜೆಟ್‌ನಲ್ಲಿ ಕಳೆದ ಬಾರಿಗಿಂತ ೪೩ ಸಾವಿರ ಕೋಟಿ ರೂ ಹಣವನ್ನು ಹೆಚ್ಚಳ ಮಾಡಲಾಗಿದೆ. ರಾಜ್ಯ ಸುಭದ್ರವಾದರೆ ಕೇಂದ್ರ ಸುಭದ್ರವಾಗಿರಲಿದೆ. ಕೇಂದ್ರವು ಹೆಚ್ಚಿನ ಅನುದಾನ ನೀಡಿದರೆ ಸೇತುವೆ, ರಸ್ತೆ, ನೀರಾವರಿ ಸೇರಿದಂತೆ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
– ಸಿದ್ದರಾಮಯ್ಯ.
ಮುಖ್ಯಮಂತ್ರಿಗಳು.

ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಎಸ್.ಲಾಡ್ ಮಾತನಾಡಿ, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಿಸಿದೆ. ಭಾರತದಲ್ಲಿ ವಿನೂತನ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ. ಚಕ್ಕಡಿ ರಸ್ತೆಗಳನ್ನು ಈ ಭಾಗದಲ್ಲಿ ನಿರ್ಮಾಣ ಮಾಡಲಾಗಿದೆ. ಅಚ್ಚುಕಟ್ಟಾದ ಬಡಾವಣೆ ನಿರ್ಮಿಸಲಾಗುತ್ತಿದೆ. ಈ ಭಾಗ ಇನ್ನಷ್ಟು ಅಭಿವೃದ್ಧಿಯಾಗಲಿ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here