`ರಾಷ್ಟ್ರೀಯ ಲೋಕ ಅದಾಲತ್’ ಮಾರ್ಚ್ 9ಕ್ಕೆ

0
lok adalat
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ಮಾರ್ಚ್ 9ರಂದು `ರಾಷ್ಟ್ರೀಯ ಲೋಕ ಅದಾಲತ್’ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಅವರು ತಿಳಿಸಿದರು.

Advertisement

ಶುಕ್ರವಾರ ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಪರೆನ್ಸ್ ಹಾಲ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚ್ ನಂತೆ ಒಟ್ಟು 15 ಬೆಂಚ್‌ಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 19622 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 3330 ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದರು.

ಪಕ್ಷಗಾರರು ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಬಹುದಾಗಿದೆ. ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು. ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ಸಹಾಯಕವಾಗಲಿದೆ ಎಂದು ತಿಳಿಸಿದರು.

ಕಳೆದ ಡಿಸೆಂಬರ್-2023ರಲ್ಲಿ ಜರುಗಿದ ಲೋಕ ಅದಾಲತ್‌ನಲ್ಲಿ 3718 ಚಾಲ್ತಿ ಪ್ರಕರಣಗಳನ್ನು, 7126 ವ್ಯಾಜ್ಯಪೂರ್ವ ಪ್ರಕರಣಗಳೂ ಸೇರಿ ಒಟ್ಟು 10934 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ ಮಾತನಾಡಿ, ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಈಗಾಗಲೇ ಸಂಬಂಧಪಟ್ಟ ಇಲಾಖೆಯ ಹಾಗೂ ನಿಗಮ ಮಂಡಳಿಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಜರುಗಿಸಿ ಹೆಚ್ಚಿನ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ತಿಳಿಯಪಡಿಸಿದೆ ಎಂದರು.

ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿದs ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳವರು ಮಾರ್ಚ್ 9ರಂದು ಜರುಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೆ.ಗುರುಪ್ರಸಾದ ತಿಳಿಸಿದರು.


Spread the love

LEAVE A REPLY

Please enter your comment!
Please enter your name here