ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ:
ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆಯಾಗಿದ್ದು, ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಮತ್ತು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅಳವಡಿಸಿರುವ ಬ್ಯಾನರ್, ಪೋಸ್ಟರ್ ಹಾಗೂ ಹೋರ್ಡಿಂಗ್ಸ್‌ಗಳನ್ನು ಶೀಘ್ರವೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ-2020 ಕರಡು ಮತಗಟ್ಟೆ ಯಾದಿ ಕುರಿತು ರಾಜಕೀಯ ಮುಖಂಡರೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಚುನಾವಣೆ ಆಯೋಗ ಸೂಚಿಸುವ ನಿರ್ದೇಶನಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಜಿಲ್ಲೆಯಲ್ಲಿ ಅಗತ್ಯಕ್ಕೆ ಅನುಸಾರವಾಗಿ ವಿಡಿಯೋ ವೀಕ್ಷಣಾ ದಳ, ಸಂಚಾರಿ ವಿಚಕ್ಷಣಾ ದಳಗಳನ್ನು ನೇಮಿಸಿ ನಿಗಾ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಒಟ್ಟು 15743 ಪದವೀಧರರ ಮತದಾರರಿದ್ದು, 28 ಮತದಾನ ಕೇಂದ್ರಗಳಿವೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಕಾಲಾವಕಾಶವಿದ್ದು, ಅರ್ಹ ಪದವೀಧರರು ಮತದಾರರು ಸಂಬಂಧಿಸಿದ ಕಛೇರಿಗಳಿಗೆ ಅರ್ಜಿ ಸಲ್ಲಿಸಬಹುದು. 80 ವರ್ಷ ಮೇಲ್ಪಟ್ಟವರು ಹಾಗೂ ಕೋವಿಡ್ ಶಂಕಿತ ಮತ್ತು ಸೋಂಕಿತ ಪದವೀಧರ ಮತದಾರರು ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ನಿಗದಿತ ಅರ್ಜಿ ನಮೂನೆಯಲ್ಲಿ ನೋಡಲ್ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಇದಕ್ಕಾಗಿ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಕೋವಿಡ್ ನಿರ್ವಹಣೆಯ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
ವಿವಿಧ ನಿಗಮ, ಮಂಡಳಿಗಳು, ಸ್ಥಳೀಯ ಪ್ರಾಧಿಕಾರ, ಸಂಸ್ಥೆಗಳ ಅಧ್ಯಕ್ಷರಿಗೆ ನೀಡಿರುವ ಸರ್ಕಾರಿ ವಾಹನಗಳನ್ನು ನಿಯಮಾನುಸಾರ ಹಿಂಪಡೆಯಬೇಕು. ಸರ್ಕಾರಿ ಗೆಸ್ಟ್‌ಹೌಸ್‌ಗಳನ್ನು ವಶಕ್ಕೆ ಪಡೆಯಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ತಹಸೀಲ್ದಾರರು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು ಸೂಚನೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ್ ಮಾಳಶೆಟ್ಟಿ, ಜೆಡಿಎಸ್ ಪ್ರತಿನಿಧಿ ರಮೇಶ್ ಕಲಬುರ್ಗಿ, ಚುನಾವಣಾ ಆರ್.ಪಿ.ಜಾಧವ್, ಬಹುಜನ ಸಮಾಜ ಪಕ್ಷದ ಪ್ರತಿನಿಧಿ ಎಂ.ಕೆ.ತಳಗಡೆ, ಜಿಲ್ಲಾ ಪಂಚಾಯತ ಸಿಇಒ ಡಾ.ಆನಂದ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ನಗರಸಭೆ ಮುಖ್ಯ ಯೋಜನಾಧಿಕಾರಿ ಎಸ್.ಎನ್.ರುದ್ರೇಶ್, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಡಿಎಚ್‌ಒ ಡಾ.ಸತೀಶ್ ಬಸರೀಗಿಡದ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರರು ಸಭೆಯಲ್ಲಿ ಇದ್ದರು.
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಧಿಸೂಚನೆ ಅಕ್ಟೋಬರ್ 1 ರಂದು ಪ್ರಕಟವಾಗಲಿದ್ದು, ಅ.8 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಅ.9 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅ.12 ಕೊನೆಯ ದಿನವಾಗಿದೆ. ಅ.28 ರಂದು ಮತದಾನ ನಡೆಯಲಿದೆ. ನವೆಂಬರ್ 2 ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದ್ದು, ನ.5 ಕ್ಕೆ ಚುನಾವಣೆ ಪ್ರಕ್ರಿಯೆ ಕೊನೆಗೊಳ್ಳಲಿದೆ.