ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಬೇಕು ಮತ್ತು ನಮ್ಮ ಮತ, ನಮ್ಮ ಧ್ವನಿಗೆ ಶಕ್ತಿ ಬರಲು ಅರ್ಹ ಎಲ್ಲ ಮತದಾರರಿಂದ ಶೇ.100ರಷ್ಟು ಮತದಾನವಾಗಬೇಕು ಎಂದು ತಾ.ಪಂ ಇಓ ಕೃಷ್ಣಪ್ಪ ಧರ್ಮರ ಹೇಳಿದರು.
ಅವರು ಶುಕ್ರವಾರ ಪಟ್ಟಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕೈಗೊಂಡ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿ, ಮತದಾನ ಪವಿತ್ರ ಕಾರ್ಯವಾಗಿದ್ದು, 18 ವರ್ಷ ತುಂಬಿದ ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡುವ ಮೂಲಕ ದೇಶದ ಋಣ ತೀರಿಸಬೇಕು. ಯುವ ಜನಾಂಗ ಮತದಾನದ ಹಕ್ಕನ್ನು ಚಲಾಯಿಸಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಬೇಕು. ಪ್ರತಿಯೊಬ್ಬರೂ ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಆಸೆ-ಆಮಿಷ, ಪ್ರೇರಣೆಗಳಿಗೆ ಒಳಗಾಗದೆ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸುವ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುನ್ನುಡಿ ಬರೆಯಬೇಕು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಸಮಾಜದಲ್ಲಿ ಯುವಕರು, ವಿದ್ಯಾರ್ಥಿಗಳು ಜಾಗೃತಿ ಮೂಡಿಸುವದು ಅವಶ್ಯವಾಗಿದೆ ಎಂದು ಹೇಳಿದರು.
ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ಸಿಡಿಪಿಓ ಮೃತ್ಯುಂಜಯ ಗುಡ್ಡದನ್ವೇರಿ, ನಂದಾ ನವಲೆ ಸೇರಿ ಅಂಗನವಾಡಿ ಕಾರ್ಯಕರ್ತರು ಇದ್ದರು. ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಮಾಡಿದರು.



