ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 25ರಿಂದ ಜಿಲ್ಲಾದ್ಯಂತ ಆರಂಭವಾಗಿವೆ. ನಗರದ ಸಿಡಿಓ ಜೈನ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಪರೀಕ್ಷಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭ ಹಾರೈಸಿದರು.
ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳ ಜೀವನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎಂಬುದು ಮಹತ್ವದ ಪಾತ್ರ ವಹಿಸಲಿದೆ. ವಿದ್ಯಾರ್ಥಿಗಳು ಎದೆಗುಂದದೇ, ಅಂಜದೇ ಯಾವುದೇ ಆತಂಕಕ್ಕೆ ಒಳಗಾಗದೇ, ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಬರೆಯಬೇಕು. ಉತ್ತಮ ಅಂಕಗಳಿಸುವ ಮೂಲಕ ಜೀವನವನ್ನು ರೂಪಿಸಿಕೊಳ್ಳಲು ಮುಂದಾಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಪರೀಕ್ಷಾ ಕೇಂದ್ರದ ವ್ಯವಸ್ಥೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರೊಂದಿಗೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿಗಳು, ಯಾವುದೇ ಅಕ್ರಮಗಳಿಗೆ, ಗೊಂದಲಗಳಿಗೆ ಅವಕಾಶ ನೀಡದಂತೆ ಸೂಚಿಸಿದರು. ಪರೀಕ್ಷೆಗಳು ಸುಲಲಿತವಾಗಿ ಜರುಗಲು ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25ರಿಂದ ಪ್ರಾರಂಭಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು 60 ಪರೀಕ್ಷಾ ಕೇಂದ್ರಗಳಿದ್ದು 16325 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 100 ಮೀಟರ್ ಅಂತರದಲ್ಲಿ ಕಲಂ 144 ಜಾರಿಗೊಳಿಸಲಾಗಿದೆ. ಪರೀಕ್ಷೆಗಳನ್ನು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ಜರುಗಿಸಲು ಅಗತ್ಯ ಕ್ರಮ ವಹಿಸಲಾಗಿದೆ.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರುಡಿ, ನಡುವಿನಮನಿ ಸೇರಿದಂತೆ ಶಾಲೆಯ ಮುಖ್ಯಸ್ಥರು, ವಿದ್ಯಾರ್ಥಿಗಳು ಇದ್ದರು.
ಪರೀಕ್ಷಾರ್ಥಿಗಳಿಗೆ ಬಸ್ ವ್ಯವಸ್ಥೆ
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕ.ರಾ.ರ.ಸಾ ಸಂಸ್ಥೆಯು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ
ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯ 60 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರ ಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.