ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ರೈತರೊಬ್ಬರು ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ಬೆಳಗ್ಗಿನ ಜಾವ ಜಮೀನಿಗೆ ಹೂವು ಬಿಡಿಸಲು ತೆರಳಿದ್ದ ರೈತನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ್ದು, ತೀವ್ರ ರಕ್ತಸ್ರಾವದಿಂದ ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಲ್ಲದೇವನಹಳ್ಳಿ ಗ್ರಾಮದ ಶಿವಸ್ವಾಮಿ (62) ಎಂದು ಗುರುತಿಸಲಾಗಿದೆ.
ಶಿವಸ್ವಾಮಿ ಅವರು ಗ್ರಾಮದಲ್ಲಿ ಅರ್ಚಕರಾಗಿಯೂ ಕೆಲಸ ಮಾಡುತ್ತಿದ್ದರು. ಎಂದಿನಂತೆ ಇಂದು ಬೆಳ್ಳಂಬೆಳಗ್ಗೆ ತಮ್ಮ ಜಮೀನಿನಲ್ಲಿ ಕಾಕಡ ಹೂವು ಬಿಡಿಸಲು ತೆರಳಿದ್ದರು. ಈ ವೇಳೆ ಜಮೀನಿನಲ್ಲಿ ಅವಿತು ಕುಳಿತಿದ್ದ ಚಿರತೆ ಏಕಾಏಕಿ ಅವರ ಮೇಲೆ ದಾಳಿ ನಡೆಸಿದೆ. ಚಿರತೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದ ಶಿವಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ರಕ್ತಸ್ರಾವದಿಂದ ಜಮೀನಿನಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕಳೆದ ಹಲವು ತಿಂಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು, ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಜಮೀನು ಮತ್ತು ಗ್ರಾಮಗಳ ಸುತ್ತಮುತ್ತ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದಲ್ಲದೆ, ಜಾನುವಾರುಗಳ ಮೇಲೂ ಪದೇಪದೇ ದಾಳಿ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಕಲ್ಲದೇವನಹಳ್ಳಿ ಗ್ರಾಮದಲ್ಲಿಯೂ ಕಳೆದ ಕೆಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಇತ್ತೀಚೆಗೆ ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದ ಘಟನೆಗಳು ವರದಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆಹಿಡಿದು ಗ್ರಾಮಸ್ಥರಿಗೆ ರಕ್ಷಣೆ ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಆದರೆ ಚಿರತೆ ಹಾವಳಿ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳದ ಪರಿಣಾಮ ಇದೀಗ ರೈತರೊಬ್ಬರು ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿರತೆ ಸೆರೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮಸ್ಥರ ಸುರಕ್ಷತೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

