ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಅತ್ಯಂತ ಜನಪ್ರಿಯವಾಗಿರುವ ಶಕ್ತಿ ಯೋಜನೆಯಡಿ ಈವರೆಗೆ 500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ ಸಂಭ್ರಮದ ಹಿನ್ನೆಯಲ್ಲಿ ಗದಗ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಬಸ್ಗೆ ಪೂಜೆ ಮಾಡಿ, ಸಿಹಿ ವಿತರಿಸಿ ಅವರು ಮಾತನಾಡಿದರು.
ಈ ಯೋಜನೆ ಯಶಸ್ವಿಯಾಗಲು ಸಾರಿಗೆ ಇಲಾಖೆಯ ಸಿಬ್ಬಂದಿ ಹಾಗೂ ಸರ್ಕಾರದ ಉತ್ಸಾಹದ ಕಾರ್ಯವೈಖರಿಯೇ ಕಾರಣವಾಗಿದೆ. ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತವಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುವ ಅವಕಾಶ ದೊರೆತಿದ್ದು, ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯ ಅರಿವು ಹೆಚ್ಚಾಗಿದೆ. ಈ ಯೋಜನೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರ ನಿಷ್ಠೆಯಿಂದ ಯಶಸ್ಸು ಕಂಡಿದೆ ಎಂದರು.
ಗದಗ ಜಿಲ್ಲೆಯಲ್ಲಿ ಇದುವರೆಗೆ 10.98 ಲಕ್ಷ ಮಹಿಳೆಯರು ಈ ಯೋಜನೆಯ ಲಾಭ ಪಡೆದಿದ್ದು, 358.89 ಕೋಟಿ ರೂಪಾಯಿ ಮೌಲ್ಯದ ಪ್ರಯಾಣವಾಗಿದೆ ಎಂದು ಅಸೂಟಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಪೀರ್ಸಾಬ್ ಕೌತಾಳ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ್ ಬಬರ್ಚಿ, ಸಮಿತಿಯ ಸದಸ್ಯರಾದ ಕೃಷ್ಣಗೌಡ ಎಚ್.ಪಾಟೀಲ, ಅಶೋಕ ಮಂದಾಲಿ ಮುಂತಾದವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಡಿ. ದೇವರಾಜ, ಸಂಚಲನಾಧಿಕಾರಿ ಪಿ.ವೈ. ಮೇತ್ರಿ, ಡಿಪೋ ಮ್ಯಾನೇಜರ್ ಬಿ.ಎಲ್. ಗೆಣ್ಣೂರ, ವೆಂಕಟೇಶ್ ಜಾದವ, ಶಿವಾನಂದ ಸಂಗಣ್ಣನವರ, ಎಂ.ಬಿ. ಪಾಟೀಲ ಸೇರಿ ಹಲವರು ಉಪಸ್ಥಿತರಿದ್ದರು.