ವಿಜಯಸಾಕ್ಷಿ ಸುದ್ದಿ, ಗದಗ : ಅಹಿಂದ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ಮುಡಾದಲ್ಲಿ ಹಗರಣ ನಡೆದಿಲ್ಲ ಎಂದು ಹೇಳಿ 14 ನಿವೇಶನಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನಪಲ್ಲಟವಾಗುತ್ತಿದೆ, ರಾಜ್ಯದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡುವ ಹಂತದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.
ಗದುಗಿನಲ್ಲಿ ಬುಧವಾರ ಬಿಜೆಪಿ ಸದಸ್ಯತಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ರಾಜೀನಾಮೆ ಕೊಡುವ ಹಂತಕ್ಕೆ ಬಂದು ನಿಂತಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿಯಾಗಿದೆ. ಮುಡಾ ವಿಚಾರದಲ್ಲಿ ಹಗರಣ ಆಗಿದೆ ಎಂದು ಸ್ವತಃ ಸಿಎಂ ಒಪ್ಪಿಕೊಂಡಿದ್ದಾರೆ. ಸೈಟ್ ಹಿಂದಿರುಗಿಸಿದ್ದಾರೆ. ರಾಜೀನಾಮೆ ಕೇಳಿದ್ದು, ರಾಜೀನಾಮೆಯನ್ನೂ ಕೊಡುತ್ತಾರೆ.
ಬಹಳ ದಿನ ಭಂಡತನ ಮುಂದುವರೆಸಲು ಸಾಧ್ಯವಿಲ್ಲ. ಕಾಂಗ್ರೆಸ್‌ನಲ್ಲಿರುವ ಆಕಾಂಕ್ಷಿಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದರು.
ಸಚಿವ ಸತೀಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಬಿ.ವೈ. ವಿಜಯೇಂದ್ರ, ನಾನು ಬಿಜೆಪಿ ರಾಜ್ಯಾಧ್ಯಕ್ಷ ಎನ್ನುವುದು ಎಷ್ಟು ಸತ್ಯವೋ ಶಿಕಾರಿಪುರ ಕ್ಷೇತ್ರದ ಶಾಸಕ ಎನ್ನುವುದೂ ಅಷ್ಟೇ ಸತ್ಯ. ನಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ತಾಲೂಕಿನಿಂದ ಬಂದ ನಿಯೋಗದೊಂದಿಗೆ ಭೇಟಿಯಾಗಿದ್ದೇನೆ. ಇದರಲ್ಲಿ ರಾಜಕೀಯವೇನಿಲ್ಲ. ಕೆಲವೇ ದಿನದಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಯಾಗಲಿದೆ.
ಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಹೇಳುವವರೆಲ್ಲರೂ ಸಿಎಂ ಸ್ಥಾನದ ಆಕಾಂಕ್ಷಿಗಳೇ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು.
ರಾಜ್ಯದ ಪ್ರಜೆಗಳು ದಡ್ಡರಲ್ಲ. ರಾಜ್ಯದ ಜನ, ಶಾಸಕರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದರು. ಕುಟುಂಬ ರಾಜಕಾರಣದಿಂದ ಬಿಜೆಪಿ ಹಾಳಾಗಿದೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಈಗ ಬಿಜೆಪಿಯಲ್ಲಿಲ್ಲ. ಅವರ ಹೇಳಿಕೆಯ ಬಗ್ಗೆ ಯಾಕೆ ತಲೆ ಕೆಡಿಸಿಕೊಳ್ಳಬೇಕು, ರಾಜ್ಯದ ಜನರಿಗೆ ಎಲ್ಲವೂ ಗೊತ್ತಿದೆ. ಅವರಿಗೆ ಒಳ್ಳೆಯದಾಗಿ ಎಂದರು.
ನಗರದ ಬಿಜೆಪಿ ಕಚೇರಿಯಲ್ಲಿ ಸದಸ್ಯತಾ ಅಭಿಯಾನಕ್ಕೆ ಚಾಲನೆ ನೀಡಲು ಬಿ.ವೈ.ವಿಜಯೇಂದ್ರ ಆಗಮಿಸುತ್ತಿದ್ದಂತೆ ಪುಷ್ಪವೃಷ್ಟಿಯೊಂದಿಗೆ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ವಿಜಯೇಂದ್ರರಿಗೆ ಮಹಿಳಾ ಕಾರ್ಯಕರ್ತರು ಜಿಲೇಬಿ ತಿನ್ನಿಸಲು ಮುಂದಾದಾಗ, ಹರ್ಯಾಣದಲ್ಲಿ ಕಾಂಗ್ರೆಸ್ ಗೆದ್ದರೆ ಜಿಲೇಬಿ ತಿನ್ನಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಹೀಗಾಗಿ ಜಿಲೇಜಿ ತಿನ್ನಿಸುತ್ತಿದ್ದಾರೆ ಎಂದು ನಗುತ್ತಲೇ ಚಟಾಕಿ ಹಾರಿಸಿದರು.
Advertisement
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಯಾವುದೇ ಅಭಿವೃದ್ಧಿ ಕಾರ್ಯ, ಹೊಸ ಯೋಜನೆಗಳನ್ನು ಕೊಟ್ಟಿಲ್ಲ. ಗ್ಯಾರಂಟಿಗಳ ಬಗ್ಗೆ ಉದ್ದುದ್ದ ಭಾಷಣ ಮಾಡಿದರು, ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿಗಳೂ ಬಹುತೇಕ ನಿಂತುಹೋಗಿವೆ. ಅಹಿಂದ ಹೆಸರಲ್ಲಿ ಅಧಿಕಾರಕ್ಕೆ ಬಂದು ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದ ಹಣ ದುರುಪಯೋಗವಾಗಿದೆ.– ಬಿ.ವೈ. ವಿಜಯೇಂದ್ರ.ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ.