ಹಾಸನ: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕಾರ್ಜುವಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ರೂಪ ಅವರ ಪುತ್ರ ಅಪಘಾತದಲ್ಲಿ ಮೃತಪಟ್ಟಿದ್ದಾನೆ. 21 ವರ್ಷದ ಸುಜಯ್ ಮೃತ ದುರ್ದೈವಿ.
ತಾಯಿ ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲೇ ಮಗನ ಸಾವಿನ ಸುದ್ದಿ ಕುಟುಂಬಕ್ಕೆ ಬರಸಿಡಿಲಿನಂತೆ ಅಪ್ಪಳಿಸಿದೆ. ಬುಧವಾರ (ನ.25) ಸಂಜೆ ಲಕ್ಷ್ಮೀಪುರದ ಬಳಿ ಬೈಕ್ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಸುಜಯ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮಗನ ಸಾವಿನ ಸುದ್ದಿ ಕೇಳಿ ಬೆಂಗಳೂರಿನಿಂದ ಆಲೂರಿಗೆ ವಾಪಸ್
ಮಗ ಅಪಘಾತದಲ್ಲಿ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ರೂಪ ಅವರು ಬೆಂಗಳೂರಿನಿಂದ ಆಲೂರಿಗೆ ವಾಪಸ್ ಆಗಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಆಲೂರು ಆಸ್ಪತ್ರೆಯಲ್ಲಿ ಮೃತದೇಹ
ಸುಜಯ್ ಅವರ ಮೃತದೇಹವನ್ನು ಆಲೂರು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮುಂದಿನ ಕ್ರಮಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.









