ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾಂಸ ಹಾಗೂ ಎಗ್‌ರೈಸ್ ಅಂಗಡಿಗಳ ಪರಿಣಾಮ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಮಕ್ಕಳು ಹಾಗೂ ಸಾಕು ಪ್ರಾಣಿಗಳ ಜೀವಕ್ಕೆ ಅಪಾಯ ಎದುರಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಅಂಗಡಿಗಳ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ರಸ್ತೆ ಬದಿ, ಖಾಲಿ ಜಾಗ ಹಾಗೂ ಚರಂಡಿಗಳ ಬಳಿ ಎಸೆಯುತ್ತಿರುವುದರಿಂದ ಬೀದಿ ನಾಯಿಗಳಿಗೆ ಶಾಶ್ವತ ಆಹಾರ ಮೂಲ ಸಿಗುತ್ತಿದ್ದು, ನಾಯಿಗಳು ಗುಂಪುಗೂಡಿ ಸಾಕು ಪ್ರಾಣಿಗಳು ಹಾಗೂ ಸಾರ್ವಜನಿಕರ ಮೇಲೆ ದಾಳಿ ನಡೆಸುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ.
ಇದಕ್ಕೆ ಸಾಕ್ಷಿಯೆಂಬಂತೆ ಬುಧವಾರ ಬೆಳಗಿನ ಜಾವ ತಾಲೂಕಿನ ಗೊಜನೂರ ಗ್ರಾಮದಲ್ಲಿ ರೈತ ಚನ್ನಪ್ಪ ಷಣ್ಮುಕಿ ಅವರ ಮನೆಯಲ್ಲಿದ್ದ ಹಸುಗರುವಿನ ಮೇಲೆ ಬೀದಿ ನಾಯಿಗಳು ಮಾರಣಾಂತಿಕ ದಾಳಿ ನಡೆಸಿವೆ. ಗಂಭೀರವಾಗಿ ಗಾಯಗೊಂಡ ಕರುವನ್ನು ಗದಗ ಜಿಲ್ಲಾ ಪಶುವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.
ಈ ಘಟನೆಗೆ ಬೇಸರ ವ್ಯಕ್ತಪಡಿಸಿರುವ ರೈತ ಚನ್ನಪ್ಪ ಷಣ್ಮುಕಿ, ತಹಸೀಲ್ದಾರರು, ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಪಶುವೈದ್ಯಕೀಯ ಇಲಾಖೆಗೆ ಮನವಿ ಸಲ್ಲಿಸಿ, ಇಂತಹ ಘಟನೆಗಳಿಗೆ ಕಾರಣವಾಗುತ್ತಿರುವ ಅನಧಿಕೃತ ಮಾಂಸ ಮಾರಾಟದ ಅಂಗಡಿಗಳನ್ನು ಬಂದ್ ಮಾಡಬೇಕು ಹಾಗೂ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಮನವಿ ಸ್ವೀಕರಿಸಿದ ಗ್ರಾಮ ಆಡಳಿತಾಧಿಕಾರಿ ಅನಿಲಕುಮಾರ ಬೇವಿನಮರದ, ಘಟನೆಯ ಕುರಿತು ಮಾಹಿತಿ ಪಡೆದು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಶಾಲೆಗೆ ತೆರಳುವ ಮಕ್ಕಳು, ವೃದ್ಧರು ಹಾಗೂ ಬೆಳಗಿನ ಜಾವ ವಾಯುವಿಹಾರಕ್ಕೆ ಹೋಗುವ ನಾಗರಿಕರು ಕೂಡ ನಾಯಿಗಳ ದಾಳಿಯ ಭಯದಲ್ಲೇ ಓಡಾಡುವಂತಾಗಿದೆ. ಬೈಕ್ ಸವಾರರನ್ನು ಬೆನ್ನಟ್ಟುವ ಘಟನೆಗಳು ಅಪಘಾತಗಳಿಗೆ ಕಾರಣವಾಗುತ್ತಿರುವುದು ಸಾರ್ವಜನಿಕರ ಆತಂಕ ಹೆಚ್ಚಿಸಿದೆ.
ಬೀದಿ ನಾಯಿಗಳ ಸಂತಾನಹರಣ, ರೇಬೀಸ್ ಲಸಿಕಾ ಅಭಿಯಾನ ಹಾಗೂ ಮಾಂಸದ ಅಂಗಡಿಗಳಿಗೆ ಕಡ್ಡಾಯ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ತಾಲೂಕಿನಾದ್ಯಂತ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಅಧಿಕಾರಿಗಳು ತಾತ್ಕಾಲಿಕ ಕ್ರಮಕ್ಕೆ ಸೀಮಿತರಾಗದೇ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲದಿದ್ದರೆ ರೈತರೊಂದಿಗೆ ಹೋರಾಟ ನಡೆಸಲಾಗುವುದು ಎಂದು ಸಮಗ್ರ ರೈತ ಸಂಘಟನೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಮಂಜುನಾಥ ಮಾಗಡಿ ಎಚ್ಚರಿಕೆ ನೀಡಿದ್ದಾರೆ.
“ಅನಧಿಕೃತ ಮಾಂಸ ಹಾಗೂ ಎಗ್‌ರೈಸ್ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ, ಬೀದಿ ನಾಯಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.”
ಮಂಜುನಾಥ ಮಾಗಡಿ, ತಾಲೂಕು ಅಧ್ಯಕ್ಷರು, ಸಮಗ್ರ ರೈತ ಸಂಘಟನೆಗಳ ಒಕ್ಕೂಟ



