ವಿಜಯಸಾಕ್ಷಿ ಸುದ್ದಿ, ಗದಗ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಸೆಪ್ಟೆಂಬರ್ 21ರಂದು ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ವ್ಯವಸ್ಥಿತವಾಗಿ ನಡೆಸಲಾಗುವುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಶ್ರೀದೇವಿ ಎಸ್.ಎನ್. ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕವಾಗಿ 60ರಿಂದ 69, 70ರಿಂದ 79 ಹಾಗೂ 80 ವರ್ಷ ಮೇಲ್ಪಟ್ಟವರ ವಿಭಾಗಗಳಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಕ್ರೀಡಾ ಸ್ಪರ್ಧೆಗಳಲ್ಲಿ ಬಿರುಸಿನ ನಡಿಗೆ, ಬಕೆಟ್‌ಗೆ ಚೆಂಡು ಎಸೆಯುವುದು, ಮ್ಯೂಸಿಕಲ್ ಚೇರ್, ಚೇಸ್ ಹಾಗೂ ಕೇರಂ ಸ್ಪರ್ಧೆಗಳು ನಡೆಯಲಿವೆ.
ಅದೇ ರೀತಿ ಏಕಪಾತ್ರಾಭಿನಯ ಹಾಗೂ ಗಾಯನ ಸ್ಪರ್ಧೆಗಳನ್ನು ಸಾಂಸ್ಕೃತಿಕ ವಿಭಾಗದಲ್ಲಿ ಆಯೋಜಿಸಲಾಗುವುದು. ಸ್ಪರ್ಧೆಗಳಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವವರು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವವರು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅಕ್ಟೋಬರ್ 1ರಂದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ದಿನಾಚರಣೆ ಹಿನ್ನೆಲೆಯಲ್ಲಿ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ, ವೇದಿಕೆ, ಉಪಾಹಾರ, ಪುಸ್ತಕ, ಆಸನ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರು, ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ಮುತ್ತಪ್ಪ ಕಂಬಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಾಗರ ಚವ್ಹಾಣ, ಹಿರಿಯ ನಾಗರಿಕರ ಸಂಘದ ತಾಲೂಕು ಘಟಕದ ಅಧ್ಯಕ್ಷರು, ಹಿರಿಯ ನಾಗರಿಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿರಿಯ ನಾಗರಿಕರಲ್ಲಿರುವ ಪ್ರತಿಭೆ ಹಾಗೂ ಉತ್ಸಾಹವನ್ನು ಗುರುತಿಸುವ ಉದ್ದೇಶದಿಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಎಲ್ಲ ಅರ್ಹ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.
— ಶ್ರೀದೇವಿ ಎಸ್.ಎನ್., ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ



