ವಿಜಯಸಾಕ್ಷಿ ಸುದ್ದಿ, ಗದಗ: 1980ರಿಂದ ಸತತ 8 ಬಾರಿ ವಿಧಾನಪರಿಷತ್ತಿಗೆ ಆಯ್ಕೆಯಾಗುವ ಮೂಲಕ ಸೋಲನ್ನೇ ಗದರಿಸಿ ಸೋಲಿಲ್ಲದ ಸರದಾರ ಎಂಬ ಕೀರ್ತಿಗೆ ಪಾತ್ರರಾದ ಸಭಾಪತಿ ಬಸವರಾಜ ಹೊರಟ್ಟಿಯವರ 45 ವರ್ಷಗಳ ಸಾರ್ವಜನಿಕ ಬದುಕಿನ ಕುರಿತು ಬಳ್ಳಾರಿ ಜಿಲ್ಲೆಯ ಶಿರಗುಪ್ಪ ತಾಲೂಕಿನ ಸಿರಗೇರಿಯ ಶ್ರೀ ಅನ್ನಪೂರ್ಣ ಕ್ರಿಯೇಶನ್ಸ್ನವರು ಹೊರತಂದ ಸಾಕ್ಷ್ಯಚಿತ್ರ ಭಾಗ-1ರ ಬಿಡುಗಡೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಡಿ.18ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಉದ್ಘಾಟಿಸಲಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದ ಸಮ್ಮೇಳನ ಸಭಾಂಗಣ(354)ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹೊರಟ್ಟಿಯವರ ಕುರಿತ ಸಾಕ್ಷ್ಯಚಿತ್ರ ಭಾಗ-8ರ ಲೋಕಾರ್ಪಣೆಯನ್ನು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ, ಮುಖ್ಯ ಅತಿಥಿಗಳಾಗಿ ಗೃಹ ಸಚಿವ ಡಾ. ಜಿ.ಪರಮೇಶ್ವರ, ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜ, ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ ಸೇರಿದಂತೆ ಗಣ್ಯಮಾನ್ಯರು, ಹೊರಟ್ಟಿಯವರ ಹಿತೈಷಿಗಳು ಭಾಗವಹಿಸಲಿದ್ದಾರೆಂದು ಶ್ರೀ ಅನ್ನಪೂರ್ಣ ಕ್ರಿಯೇಶನ್ಸ್ನ ನಿರ್ದೇಶಕರು, ನಿರ್ಮಾಪಕರಾದ ಸಿರಿಗೆರಿ ಯರಿಸ್ವಾಮಿ ತಿಳಿಸಿದ್ದಾರೆ.