ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 5,431 ಪ್ರಥಮ ದರ್ಜೆ ಸಹಾಯಕ (FDA) ಹಾಗೂ ದ್ವಿತೀಯ ದರ್ಜೆ ಸಹಾಯಕ (SDA) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವಿಸ್ತರಿಸಿದೆ.
ನವೆಂಬರ್ 25ಕ್ಕೆ ಮುಕ್ತಾಯವಾಗಬೇಕಿದ್ದ ಅರ್ಜಿ ಸಲ್ಲಿಕೆ ಗಡುವನ್ನು ನವೆಂಬರ್ 30ರವರೆಗೆ ಹೆಚ್ಚಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸಲು ನವೆಂಬರ್ 25 ಹಾಗೂ ಪರೀಕ್ಷಾ ಶುಲ್ಕ ಪಾವತಿಸಲು ನವೆಂಬರ್ 26 ಕೊನೆಯ ದಿನವಾಗಿತ್ತು. ಆದರೆ, ಗಡುವು ವಿಸ್ತರಿಸುವಂತೆ ಹಲವು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿರುವ ಕೆಇಎ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ನವೆಂಬರ್ 30ರವರೆಗೆ ಅವಕಾಶ ಕಲ್ಪಿಸಿದೆ.
ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ನವೆಂಬರ್ 24ರಂದು ಅಧಿಕೃತ ಮಾಹಿತಿ ನೀಡಿದ್ದಾರೆ. ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸುವುದರ ಜೊತೆಗೆ ಪರೀಕ್ಷಾ ಶುಲ್ಕವನ್ನೂ ಕಡ್ಡಾಯವಾಗಿ ಪಾವತಿಸಬೇಕು ಎಂದು ಸೂಚಿಸಲಾಗಿದೆ.
ಉಳಿದ ನೇಮಕಾತಿ ನಿಯಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈಗಾಗಲೇ ನಿಗದಿಪಡಿಸಿರುವ ವೇಳಾಪಟ್ಟಿಯಂತೆಯೇ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಕೊನೆಯ ಕ್ಷಣದಲ್ಲಿ ಸರ್ವರ್ ಸಮಸ್ಯೆ ಅಥವಾ ತಾಂತ್ರಿಕ ತೊಂದರೆ ಎದುರಾಗುವ ಸಾಧ್ಯತೆ ಇರುವುದರಿಂದ ಅಭ್ಯರ್ಥಿಗಳು ಕೊನೆಯ ದಿನದವರೆಗೆ ಕಾಯದೆ ಆದಷ್ಟು ಬೇಗ ಅರ್ಜಿ ಸಲ್ಲಿಸುವಂತೆ ಕೆಇಎ ಸಲಹೆ ನೀಡಿದೆ.







