ಧಾರವಾಡ: ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದ ಅನುಮಾನಾಸ್ಪದ ಘಟನೆಯೊಂದು ಪೋಷಕರಲ್ಲಿ ಭೀತಿ ಮೂಡಿಸಿದೆ. 10 ವರ್ಷದ ಬಾಲಕನನ್ನು ತಡೆದು ಅಪರಿಚಿತರು ಇಂಜೆಕ್ಷನ್ ಚುಚ್ಚಿ ಪರಾರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮಣಿಕಂಠ ಗಾಣಿಗೇರ ಎಂಬ ಬಾಲಕ ರಸ್ತೆ ಮೂಲಕ ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ವಿಳಾಸ ಕೇಳುವ ನೆಪದಲ್ಲಿ ಮಾತು ಆರಂಭಿಸಿದ್ದಾರೆ. ಬಳಿಕ ಏಕಾಏಕಿ ಬಾಲಕನ ಬಾಯಿಯನ್ನು ಹಿಡಿದು ಇಂಜೆಕ್ಷನ್ ಚುಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಬಳಿಕ ಬಾಲಕ ಅಸ್ವಸ್ಥಗೊಂಡ ಹಿನ್ನೆಲೆ ಕುಟುಂಬಸ್ಥರು ತಕ್ಷಣ ಕುಂದಗೋಳ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಬಾಲಕನಿಗೆ ಯಾವ ಇಂಜೆಕ್ಷನ್ ನೀಡಲಾಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಇದರಿಂದ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮನೆ ಮಾಡಿದ್ದು, ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ.
ಘಟನೆ ಸಂಬಂಧ ಕುಂದಗೋಳ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ಇತರೆ ಮಾಹಿತಿಗಳ ಆಧಾರದಲ್ಲಿ ತನಿಖೆ ಮುಂದುವರಿಸಿದ್ದಾರೆ.



