ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನ ಅಸಮಾಧಾನಿತ ನಾಯಕರ ದೊಡ್ಡ ತಂಡ ಬಿಜೆಪಿಗೆ ಸೇರ್ಪಡೆಯಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯಲಿವೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಸ್ಫೋಟಕ ಹೇಳಿಕೆ ನೀಡಿದರು.
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಸಾಕಷ್ಟು ಅಸಮಾಧಾನ ಉಂಟಾಗುವ ಸಾಧ್ಯತೆಯಿದೆ. ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗಲಿದ್ದು, ಈಗಾಗಲೇ ಹಲವು ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.
2028ರ ವಿಧಾನಸಭೆ ಚುನಾವಣೆಯವರೆಗೆ ಜನರು ಕಾಂಗ್ರೆಸ್‌ಗೆ ಆಡಳಿತ ನಡೆಸುವ ಅವಕಾಶ ನೀಡಿದ್ದಾರೆ. ಅಲ್ಲಿಯವರೆಗೆ ಬಿಜೆಪಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕೆಲಸ ಮಾಡಲಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರು ಹಾಗೂ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕೆ.ಎಸ್. ಈಶ್ವರಪ್ಪ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ಸೇರಿದಂತೆ ಪಕ್ಷದಿಂದ ದೂರ ಉಳಿದ ನಾಯಕರು ಮತ್ತೆ ಮುಖ್ಯವಾಹಿನಿಗೆ ಬಂದರೆ ಬಿಜೆಪಿಗೆ ಇನ್ನಷ್ಟು ಬಲ ಸಿಗಲಿದೆ. ಪಕ್ಷ ತೊರೆದ ಎಲ್ಲರನ್ನು ಮರಳಿ ಕರೆತಂದರೆ ಸಂಘಟನೆ ಮತ್ತಷ್ಟು ಸದೃಢವಾಗಲಿದೆ. ಇದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ನಿರಾಣಿ ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಸಿ. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರುಡಗಿ, ಪ್ರಶಾಂತ ನಾಯ್ಕರ್, ಮಹಾಂತೇಶ ನಲವಡಿ, ಸಿದ್ದಪ್ಪ ಪಲ್ಲೇದ, ಮಹಿಳಾ ಘಟಕದ ಕೊಳ್ಳಿ ಸೇರಿದಂತೆ ಅನೇಕರಿದ್ದರು.



