ನವದೆಹಲಿ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಪತನದಲ್ಲಿ ಅಜಿತ್ ಪವಾರ್ ಸೇರಿದಂತೆ ಐವರು ದುರ್ಮರಣ ಹೊಂದಿದ ಹಿನ್ನೆಲೆಯಲ್ಲಿ ಪ್ರಧಾನಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶೋಕ ಸಂದೇಶ ಪ್ರಕಟಿಸಿದ್ದಾರೆ.
ತಮ್ಮ ಸಂದೇಶದಲ್ಲಿ ಅಜಿತ್ ಪವಾರ್ ಅವರನ್ನು ಜನಸೇವೆಗೆ ಸದಾ ಮುಂಚೂಣಿಯಲ್ಲಿ ನಿಂತ ನಾಯಕ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ, ಅವರು ತಳಮಟ್ಟದ ಜನರೊಂದಿಗೆ ನೇರ ಸಂಪರ್ಕ ಹೊಂದಿದ್ದ ಜನಪ್ರಿಯ ನಾಯಕರು ಎಂದು ಸ್ಮರಿಸಿದ್ದಾರೆ. ಆಡಳಿತಾತ್ಮಕ ವಿಷಯಗಳಲ್ಲಿ ಆಳವಾದ ತಿಳುವಳಿಕೆ ಹೊಂದಿದ್ದ ಅಜಿತ್ ಪವಾರ್ ಅವರು ಬಡವರು ಮತ್ತು ದೀನದಲಿತರ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸಿದ್ದರು ಎಂದು ಪ್ರಧಾನಿ ಪ್ರಶಂಸಿಸಿದ್ದಾರೆ.
ಅಜಿತ್ ಪವಾರ್ ಅವರ ಅಕಾಲಿಕ ನಿಧನವು ಅತ್ಯಂತ ಆಘಾತಕಾರಿ ಮತ್ತು ದುಃಖಕರ ಸಂಗತಿಯಾಗಿದೆ ಎಂದು ತಿಳಿಸಿರುವ ಪ್ರಧಾನಿ ಮೋದಿ, ಈ ದುಃಖದ ಘಳಿಗೆಯಲ್ಲಿ ಅವರ ಕುಟುಂಬ ಸದಸ್ಯರು ಮತ್ತು ಅಪಾರ ಅಭಿಮಾನಿಗಳಿಗೆ ತಾನು ಹೃತ್ಪೂರ್ವಕ ಸಂತಾಪ ಸೂಚಿಸುತ್ತೇನೆ ಎಂದು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.



