ಚಿಕ್ಕಮಗಳೂರು:- ಕಾಫಿ ಕಣದಲ್ಲಿ ಮಲಗಿದ್ದ ವ್ಯಕ್ತಿಯನ್ನು ಆನೆಯೊಂದು ತನ್ನ ಸೊಂಡಿಲಿನಿಂದ ಎತ್ತಿ ಬಿಸಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ ಬೆಳಗಿನ ಜಾವ 5 ಗಂಟೆಯಲ್ಲಿ ಜರುಗಿದೆ.
ಆನೆ ಬಿಸಾಡಿದ ಫೋರ್ಸ್ ಗೆ ವ್ಯಕ್ತಿ ಹುಲ್ಲಿನ ರಾಶಿ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ನಾರಾಯಣಗೌಡ ಎಂಬ ವ್ಯಕ್ತಿ ಒಂಟಿ ಸಲಗನ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ನಾರಾಯಣಗೌಡ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಆಲ್ದೂರು ಸುತ್ತಮುತ್ತ ಒಂಟಿ ಸಲಗದ ಹಾವಳಿ ದಿನದಿಂದ ದಿನಕ್ಕೆ ಮಿತಿ ಮೀರಿದ್ದು, ಕೂಡಲೇ ಒಂಟಿ ಸಲಗವನ್ನ ಸ್ಥಳಾಂತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಆಗ್ರಹಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಲ್ಲದೇ ಶೀಘ್ರವೇ ಒಂಟಿ ಸಲಗವನ್ನು ಸೆರೆಹಿಡಿಯುವ ಭರವಸೆ ಕೊಟ್ಟಿದ್ದಾರೆ.